ಹೈದರಾಬಾದ್: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿವಾಜಿ ಪ್ರತಿಮೆ ಸ್ಥಾಪನೆ ವಿವಾದದ ಕುರಿತು ಮಾಹಿತಿ ನೀಡಿರುವ ನಿಜಾಮಾಬಾದ್ ಪೊಲೀಸ್ ಕಮಿಷನರ್ ಕೆ.ಆರ್ ನಾಗರಾಜು, ಬೋಧನ್ ಪಟ್ಟಣದಲ್ಲಿ ನಡೆದ ಕಲ್ಲು ತೂರಾಟದಲ್ಲಿ ಕಾನ್ಸ್ಟೇಬಲ್ ಒಬ್ಬರು ಗಾಯಗೊಂಡಿದ್ದು, ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಈಗಾಗಲೇ ಆ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸಂಸದ ಧರ್ಮಪುರಿ ಅರವಿಂದ್ ಟ್ವೀಟ್ ಮಾಡಿ, 'ಮಹಾರಾಷ್ಟ್ರದ ಗಡಿಯಲ್ಲಿರುವ ಬೋಧನ್ ಪಟ್ಟಣದದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಬೋಧನ್ ಮುನ್ಸಿಪಲ್ ಕೌನ್ಸಿಲ್ ಅನುಮತಿ ನೀಡಿದೆ. ಆದರೂ, ಟಿಆರ್‌ಎಸ್ ಮತ್ತು ಎಂಐಎಂ ಗೂಂಡಾಗಳು ಪಟ್ಟಣದಲ್ಲಿ ಗದ್ದಲ ಮತ್ತು ಉದ್ವಿಗ್ನತೆ ಸೃಷ್ಟಿಸುತ್ತಿದ್ದಾರೆ. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಶಾಲಾ ಆವರಣದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ!