ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ದೆಹಲಿ ಪೊಲೀಸರು ಹಾಗೂ ಇತರೆ ಭದ್ರತಾ ಪಡೆಗಳಿಗೆ ಗುಪ್ತಚರ ಇಲಾಖೆ ಸೂಚಿಸಿದೆ.
ದೆಹಲಿಯಲ್ಲಿಂದು ರೈತರ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಹೋರಾಟದ ಸ್ಥಳದಲ್ಲಿ ವಿಧ್ವಂಸಕ ಕೃತ್ಯ ಶಂಕೆಯ ಬಗ್ಗೆ ಪಾಕ್ ಮೂಲದ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್, ಭಾರತದ ಅಧಿಕಾರಿಗಳಿಗೆ ಪತ್ರ ಬರೆದಿದೆ. ಇದನ್ನು ಆಧರಿಸಿ ದೆಹಲಿ ಪೊಲೀಸರು ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಅಲರ್ಟ್ ಆಗಿರುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲದೆ ಪಾಕಿಸ್ತಾನ ಕಳುಹಿಸಿರುವ ಪತ್ರವನ್ನು ಪೊಲೀಸರು ಹಾಗೂ ಭದ್ರತಾ ಪಡೆಗಳಿಗೆ ರವಾನಿಸಿದೆ.
ಕಾನೂನು ಸುವ್ಯವಸ್ಥೆಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮೆಟ್ರೋ ನಿಲ್ದಾಣದಲ್ಲಿ ಸೂಕ್ತವಾದ ಭದ್ರತೆ ಒದಗಿಸುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಶ್ವವಿದ್ಯಾಲಯ, ಸಿವಿಲ್ ಲೈನ್ಸ್ ಮತ್ತು ವಿಧಾನಸಭಾ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಸೇವೆಯನ್ನು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಬಂದ್ ಮಾಡಲಾಗಿದೆ.
ದೆಹಲಿಯ ಗಡಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಮತ್ತೊಂದೆಡೆ ಪ್ರತಿಭಟನೆಯನ್ನು ನಿಲ್ಲಿಸುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತ ಮುಖಂಡರಲ್ಲಿ ಮನವಿ ಮಾಡಿದ್ದಾರೆ. ಭೋಪಾಲ್‌ನಲ್ಲಿ ಮಾತನಾಡಿದ ಸಿಂಗ್, ರೈತರ ಜೀವನ ಮಟ್ಟ ಸುಧಾರಿಸಲು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಕಾಯ್ದೆಗಳನ್ನು ವಾಪಸ್ ಪಡೆಯುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರದ ಕೃಷಿ ತಿದ್ದುಪಡಿ ಕಾನೂನನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 200ಕ್ಕೂ ಹೆಚ್ಚು ದಿನಗಳು ಕಳೆದಿವೆ. ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಒಮ್ಮತ ಮೂಡದ ಹಿನ್ನೆಲೆ ಪ್ರತಿಭಟನೆ ಮುಂದುವರಿದಿದೆ.