ಮಣಿಪುರ: ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮಣಿಪುರ ಸರ್ಕಾರ ಇನ್ನೂ ಐದು ದಿನಗಳವರೆಗೆ (ಜೂನ್ 15 ರವರೆಗೆ) ವಿಸ್ತರಿಸಿದೆ. "ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿರುವ ಕಾರಣ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ, ವದಂತಿ ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಅಂತರ್ಜಾಲ ನಿಷೇಧವನ್ನು ಮುಂದಿನ ಐದು ದಿನಗಳವರೆಗೆ ವಿಸ್ತರಿಸಲಾಗಿದೆ" ಎಂದು ಅಧಿಕೃತ ಪ್ರಕಟಣೆ ಮೂಲಕ ತಿಳಿಸಲಾಗಿದೆ.
ಜೂನ್ 15 ರಂದು ಮಧ್ಯಾಹ್ನ 3 ಗಂಟೆಯವರೆಗೆ ಇಂಟರ್ನೆಟ್ ನಿಷೇಧವನ್ನು ವಿಸ್ತರಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಣಿಪುರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಡಿಆರ್ ಸಪಂ ರಂಜನ್, "ರಾಜ್ಯವು ಸಹಜ ಸ್ಥಿತಿಗೆ ಮರಳುತ್ತಿದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಭಾಗದಿಂದ ಅಹಿತಕರ ಘಟನೆ ನಡೆದಿರುವ ವರದಿಯಾಗಿಲ್ಲ. ಮಣಿಪುರಾದ್ಯಂತ ಪ್ರಸ್ತುತ 349 ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿವೆ" ಎಂದರು.
"ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಲೇ ಇದೆ. ಈ ತಿಂಗಳ ಆರಂಭದಲ್ಲಿ ಉಂಟಾದ ಘರ್ಷಣೆಯಲ್ಲಿ ಸುಮಾರು 60 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದ್ದಾರೆ. ಹಿಂಸಾಚಾರದ ಸಂದರ್ಭದಲ್ಲಿ ಅನೇಕ ಮನೆಗಳು ಸುಟ್ಟು ಹೋಗಿವೆ, ರಾಜ್ಯದ ಕೆಲವು ಭಾಗಗಳಿಂದ ಹೊಸ ಹೊಸ ಘಟನೆಗಳು ವರದಿಯಾಗಿವೆ. ಒಟ್ಟು ಲೂಟಿಯಾದ 4,537 ಶಸ್ತ್ರಾಸ್ತ್ರಗಳ ಪೈಕಿ 990 ಶಸ್ತ್ರಾಸ್ತ್ರಗಳನ್ನು ರಾಜ್ಯ ಸರ್ಕಾರ ವಶಪಡಿಸಿಕೊಂಡಿದೆ" ಎಂದು ಸಚಿವರು ಹೇಳಿದರು.
ಇದನ್ನೂ ಓದಿ : ಮಣಿಪುರದಲ್ಲಿ ಹಿಂಸಾಚಾರ: 328 ಕುಕಿ ಗ್ರಾಮಸ್ಥರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಸೇನೆ
"ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಪುನಃಸ್ಥಾಪಿಸಲು ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಿಂಸಾಚಾರ ಮತ್ತು ಜನಾಂಗೀಯ ಘರ್ಷಣೆಯ ನಂತರ ಬೆಟ್ಟಗಳು ಮತ್ತು ಕಣಿವೆಗಳಲ್ಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಶನಿವಾರ ಭದ್ರತಾ ಪಡೆಗಳು ಜಂಟಿ ಕೂಂಬಿಂಗ್ ಕಾರ್ಯಾಚರಣೆಯನ್ನು ನಡೆಸಿದ್ದು, 22 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. ಈ ಮಧ್ಯೆ, ಕೇಂದ್ರ ಸರ್ಕಾರವು ಮಣಿಪುರದಲ್ಲಿ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಶಾಂತಿ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ರಾಜ್ಯದ ವಿವಿಧ ಜನಾಂಗೀಯ ಗುಂಪುಗಳ ನಡುವೆ ಶಾಂತಿ ಸ್ಥಾಪನೆ ಪ್ರಕ್ರಿಯೆಯನ್ನು ಸುಲಭಗೊಳಿಸುವ ಗುರಿ ಹೊಂದಿದೆ" ಎಂದರು.
ಇದನ್ನೂ ಓದಿ : ಮಣಿಪುರ ಹಿಂಸಾಚಾರ: ನಿವೃತ್ತ ನ್ಯಾಯಾಧೀಶರ ಸಮಿತಿಯಿಂದ ತನಿಖೆ, ನಾಳೆಯಿಂದ ಕೂಂಬಿಂಗ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇ 29 ರಿಂದ ಜೂನ್ 1ರ ನಡುವೆ ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಸಂದರ್ಭದಲ್ಲಿ ಮಣಿಪುರದ ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಮಣಿಪುರವು ಸಾಮಾನ್ಯ ಸ್ಥಿತಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ಶಾಂತಿ ಸಮಿತಿಯನ್ನು ಒಟ್ಟುಗೂಡಿಸಲಾಗುವುದು ಎಂದು ಘೋಷಿಸಿದ ಕೆಲ ದಿನಗಳ ನಂತರ ಈ ಸಮಿತಿಯನ್ನು ರಚಿಸಲಾಗಿದೆ.
ಸಂಘರ್ಷಕ್ಕೇನು ಕಾರಣ?: ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರಿಸಲು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಭುಗಿಲೆದ್ದಿದೆ. ಇಲ್ಲಿನ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3ರಂದು 'ಬುಡಕಟ್ಟು ಸಮುದಾಯಗಳ ಐಕ್ಯತಾ ಪಾದಯಾತ್ರೆ' ನಡೆದ ನಂತರ ಹಿಂಸಾಚಾರ ಸ್ಫೋಟಗೊಂಡಿತ್ತು.
ಇದನ್ನೂ ಓದಿ : ಮಣಿಪುರ ಹಿಂಸಾಚಾರ : ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ