ಜೈಪುರ(ರಾಜಸ್ಥಾನ): ಕಾಲೋನಿಯೊಂದರಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಉಂಟಾಗಿದ್ದು, ಪರಸ್ಪರ ಕಲ್ಲು ತೂರಾಟ ನಡೆಸಿದ್ದವು. ಪ್ರಕರಣ ಸಂಬಂಧ ಹನ್ನೆರಡು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜೈಲಾಪುರದ ನೈಲಾ ಹೌಸ್ ಬಳಿಯ ಆದರ್ಶನಗರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಎರಡು ಗುಂಪುಗಳ ಮಧ್ಯೆ ಮಾರಾಮಾರಿ ಸಂಭವಿಸಿದೆ. ಘರ್ಷಣೆಯಲ್ಲಿ ಹಲವಾರು ಜನರು ಗಾಯಗೊಂಡು, ಕೆಲ ವಾಹನಗಳಿಗೆ ಹಾನಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕನಿಷ್ಠ 12 ಜನರನ್ನು ಬಂಧಿಸಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಘಟನೆಯಲ್ಲಿ ಹಲವಾರು ವಾಹನಗಳನ್ನು ಧ್ವಂಸ ಮಾಡಲಾಗಿದ್ದು, ಕೆಲ ಮನೆಯ ಕಿಟಕಿಗಳನ್ನು ಮುರಿಯಲಾಗಿದೆ. ಘರ್ಷಣೆಗೆ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.
ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಮತ್ತು ಯಾವುದೇ ಹಿಂಸಾಚಾರ ನಡೆಸಬಾರದು ಎಂದು ಪೊಲೀಸ್ ತಂಡ ಜನರಿಗೆ ಮನವಿ ಮಾಡಿದೆ.
ಘರ್ಷಣೆಯ ಸುದ್ದಿ ತಿಳಿದ ತಕ್ಷಣ, ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತ ರಾಹುಲ್ ಪ್ರಕಾಶ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಪರಿಸ್ಥಿತಿಯನ್ನು ಸುಧಾರಿಸಿದ್ದಾರೆ.