ಪೂಂಚ್(ಜಮ್ಮು-ಕಾಶ್ಮೀರ): ಕಣಿವೆ ನಾಡು ಜಮ್ಮು-ಕಾಶ್ಮೀರದ ಪೂಂಚ್ನ ಸಾವ್ಜಿಯಾನ್ ಎಂಬಲ್ಲಿ ಮಿನಿ ಬಸ್ ಅಪಘಾತಕ್ಕೀಡಾಗಿದೆ. ಪರಿಣಾಮ 11 ಮಂದಿ ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. ಘಟನಾ ಸ್ಥಳದಲ್ಲಿ ಸೇನೆ, ಪೊಲೀಸ್ ಸಿಬ್ಬಂದಿ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಹೊತ್ತು ಸಾಗುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಈ ಅವಘಡ ನಡೆದಿದೆ.
ಘಟನೆಯಲ್ಲಿ ಗಾಯಗೊಂಡಿರುವ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಹಶೀಲ್ದಾರ್ ಶಹಜಾದ್ ಲತೀಫ್ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಸಾವ್ಜಿಯಾನ್ನಿಂದ ಮಂಡಿಗೆ ತೆರಳುತ್ತಿತ್ತು. ಪ್ರಾಥಮಿಕ ಮಾಹಿತಿ ಪ್ರಕಾರ 25 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದು, ಇದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗ್ತಿದೆ.

ಪರಿಹಾರ ಘೋಷಣೆ: ಬಸ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಜಮ್ಮು-ಕಾಶ್ಮೀರ ಲೆ. ಗವರ್ನರ್ ಮನೋಜ್ ಸಿನ್ಹಾ ತಲಾ 5 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಗಾಯಗೊಂಡಿರುವ ಪ್ರತಿಯೊಬ್ಬರಿಗೂ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿದರು.