ಜಮ್ಮು-ಕಾಶ್ಮೀರ: ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದಲ್ಲಿ ಭಾರಿ ಪ್ರಮಾಣದ ಒಳನುಸುಳುವಿಕೆ ಪ್ರಯತ್ನಗಳು ನಡೆಯುತ್ತಿದ್ದು, ಗಡಿ ನಿಯಂತ್ರಣ ರೇಖೆಯುದ್ದಕ್ಕೂ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾಯೊಬ್ಬರು ತಿಳಿಸಿದ್ದಾರೆ.
ಉಗ್ರರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆಯಿಂದ ಅಂತರ್ಜಾಲ ಸೇವೆ ಹಾಗೂ ಮೊಬೈಲ್ ಫೋನ್ ನೆಟ್‌ವರ್ಕ್‌ಗಳನ್ನು ಸ್ಥಗಿತಗೊಳಿಸಲಾಗಿತ್ತು. ಇಂದು ಮತ್ತೆ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭಯೋತ್ಪಾದಕರಿಂದ ಅತಿ ದೊಡ್ಡ ಒಳನುಸುಳುವಿಕೆ ಪ್ರಯತ್ನ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ನಡೆದಿತ್ತು. ಉರಿ ವಲಯದ ಬಳಿ ಒಳನುಸುಳಲು ಯತ್ನಿಸಿದ ಭಾರಿ ಶಸ್ತ್ರಸಜ್ಜಿತ ಉಗ್ರರ ಗುಂಪನ್ನು ಸೇನೆಯೂ ತಡೆದಿದೆ. ಆರಂಭಿಕ ಸಂಪರ್ಕದಲ್ಲಿ ನಮ್ಮ ಸೈನಿಕರೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಸೇನಾ ಕಾರ್ಯಾಚರಣೆ ಮೂರನೇ ದಿನವೂ ಕೂಡ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.