ವೆರಾವಲ್(ಗುಜರಾತ್): ಪಂಜಾಬ್ ರಾಜ್ಯ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಆಮ್ ಆದ್ಮಿ ಪಕ್ಷ(ಎಎಪಿ) ಇದೀಗ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ಮೇಲೆ ಕಣ್ಣಿಟ್ಟಿದೆ. ಈ ವರ್ಷಾಂತ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈಗಿನಿಂದಲೇ ಆಪ್ ಮುಖ್ಯಸ್ಥ ಕೇಜ್ರಿವಾಲ್ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ವೆರಾವಲ್ನಲ್ಲಿ ಆಯೋಜನೆಗೊಂಡಿದ್ದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, "ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ನಿರುದ್ಯೋಗಿ ಯುವಕನಿಗೂ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ಹಾಗೂ ಪ್ರತಿಯೊಬ್ಬರಿಗೂ ಉದ್ಯೋಗ ನೀಡಲಾಗುವುದು" ಎಂದು ಭರ್ಜರಿ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಸಾಮರ್ಥ್ಯ ನಮ್ಮ ಪಕ್ಷಕ್ಕಿದೆ ಎಂದು ಹೇಳಿದರು.
ಕಳೆದ ಕೆಲವು ದಿನಗಳ ಹಿಂದೆ ಗುಜರಾತ್ ಭೇಟಿಯ ಸಂದರ್ಭದಲ್ಲಿ ಮಾತನಾಡಿದ್ದ ಕೇಜ್ರಿವಾಲ್, ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ತಿಂಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದರು. ಈ ಬೆನ್ನಲ್ಲೇ ಇದೀಗ ನಿರುದ್ಯೋಗಿ ಯುವಕರಿಗೆ ಹೊಸ ಆಫರ್ ಕೊಟ್ಟಿದ್ದಾರೆ.
ಇದನ್ನೂ ಓದಿ: ಗುಜರಾತ್ನಲ್ಲಿ ಆಪ್ ಗೆದ್ದರೆ ಉಚಿತ ವಿದ್ಯುತ್: ಸಿಎಂ ಕೇಜ್ರಿವಾಲ್ ಭರವಸೆ
ಸೌರಾಷ್ಟ್ರದ ವೆರಾವಲ್ ಪಟ್ಟಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ, ದೇಶದ ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಹೆಚ್ಚುತ್ತಿದೆ. ಅಂತಹ ಪ್ರಕರಣದಲ್ಲಿ ಭಾಗಿಯಾಗುವ ತಪ್ಪಿತಸ್ಥರಿಗೆ ಶಿಕ್ಷೆ ಒದಗಿಸುವ ಹೊಸ ಕಾನೂನು ಜಾರಿಗೆ ತರುತ್ತೇವೆ ಎಂದರು.