ಕಾನ್ಪುರ್(ಉತ್ತರ ಪ್ರದೇಶ): ಮಹಮ್ಮದ್ ಪೈಗಂಬರ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ನೂಪುರ್ ಶರ್ಮಾ ವಿರುದ್ಧ ನಿನ್ನೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕರ್ನಾಟಕ, ಉತ್ತರ ಪ್ರದೇಶ, ತೆಲಂಗಾಣ ಸೇರಿ ವಿವಿಧ ರಾಜ್ಯಗಳಲ್ಲಿ ಮುಸ್ಲಿಂ ಸಂಘಟನೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದವು. ಈ ವೇಳೆ ಕೆಲವೊಂದು ಪ್ರದೇಶಗಳಲ್ಲಿ ಹಿಂಸಾಚಾರ ಉಂಟಾಗಿದ್ದು, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.
ಮುಖ್ಯವಾಗಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡು, ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದಾರೆ. ಇದಕ್ಕೆ ಕಾರಣವಾಗಿರುವ ಕಿಡಿಗೇಡಿಗಳ ವಿರುದ್ಧ ಯೋಗಿ ಸರ್ಕಾರ ಸಮರ ಸಾರಿದ್ದು, ಅವರ ನಿವಾಸಗಳ ಮೇಲೆ ಬುಲ್ಡೋಜರ್ನಿಂದ ದಾಳಿ ನಡೆಸಿ, ನಿವಾಸಗಳನ್ನ ನೆಲಸಮ ಮಾಡಿದ್ದಾರೆ.
ಹಿಂಸಾಚಾರಕ್ಕೆ ಮುಖ್ಯ ಕಾರಣವಾದ ಹಯಾತ್ ಜಾಫರ್ ಸಂಬಂಧಿ ಇಶ್ತಿಯಾಕ್ ನಿವಾಸದ ಮೇಲೆ ಬುಲ್ಡೋಜರ್ ಹರಿಸಲಾಗಿದೆ. ಈ ವೇಳೆ ಕೆಡಿಎ, ಪೊಲೀಸ್ ಅಧಿಕಾರಿಗಳು ಮತ್ತು ಆರ್ಎಎಫ್ ಸಿಬ್ಬಂದಿ ಉಪಸ್ಥಿತರಿದ್ದರು. ಹಿಂಸಾಚಾರ ಉಂಟಾಗುತ್ತಿದ್ದಂತೆ ಅಲರ್ಟ್ ಆಗಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಲ್ಲ ಪ್ರದೇಶಗಳಲ್ಲೂ ಅಲರ್ಟ್ ಆಗಿರುವಂತೆ ಸೂಚನೆ ನೀಡಿದ್ದರು.
ಪ್ರವಾದಿ ಮಹಮ್ಮದ್ ಅವರ ಬಗ್ಗೆ ಬಿಜೆಪಿ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಹೇಳಿಕೆ ಖಂಡಿಸಿ, ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲೂ ವ್ಯಾಪಕ ಹಿಂಸಾಚಾರ ನಡೆದಿದೆ. ಇದಕ್ಕೆ ಕಾರಣವಾಗಿರುವ ಸುಮಾರು 60ಕ್ಕೂ ಹೆಚ್ಚು ದುಷ್ಕರ್ಮಿಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಗೆ ಕಾರಣವಾದ ಮುಖ್ಯ ಆರೋಪಿ ಜಾವೇದ್ ಅಹ್ಮದ್ ಅವರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನೂಪುರ್ ಶರ್ಮಾ ಹೇಳಿಕೆ ಖಂಡಿಸಿ, ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಇದನ್ನೂ ಓದಿ: ನೂಪುರ್ ಹೇಳಿಕೆ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರ.. ರಾಂಚಿಯಲ್ಲಿ ಇಬ್ಬರು ಸಾವು
ಪ್ರವಾದಿ ಮಹಮ್ಮದ್ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿ ಈಗಾಗಲೇ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ನಿನ್ನೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರದ ಪ್ರಾರ್ಥನೆ ಮುಕ್ತಾಯಗೊಳ್ಳುತ್ತಿದ್ದಂತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಸ್ಲಿಮರು ಏಕಾಏಕಿ ಪ್ರತಿಭಟನೆ ನಡೆಸಲು ಬೀದಿಗಿಳಿದರು. ಈ ಸಂದರ್ಭದಲ್ಲಿ ಅನೇಕ ಕಡೆಗಳಲ್ಲಿ ಹಿಂಸಾಚಾರ ಉಂಟಾಗಿದ್ದು, ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಕಾರು, ಬೈಕ್ಗಳಿಗೆ ಬೆಂಕಿ ಹಚ್ಚಿದ್ದಾರೆ. ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ.