ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಭಾನುವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಶರಣಾದರು. ಸುಪ್ರೀಂ ಕೋರ್ಟ್ ಏಪ್ರಿಲ್ 18ರಂದು ಆಶಿಶ್ ಮಿಶ್ರಾಗೆ ನೀಡಿದ್ದ ಜಾಮೀನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿತ್ತು. ಅದರಂತೆ ಒಂದು ದಿನ ಮುಂಚಿತವಾಗಿಯೇ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ.
ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಆಶಿಶ್ ಮಿಶ್ರಾರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 4ರಂದು ವಿಚಾರಣೆ ನಡೆಸಿದ ಕೋರ್ಟ್, ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಆದೇಶಿಸಿತ್ತು.
ಪ್ರಕರಣವೇನು?: 3 ಅಕ್ಟೋಬರ್ 2021 ರಂದು ಉತ್ತರಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ರೈತರ ಆಂದೋಲನದ ವೇಳೆ ಉಂಟಾದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಜನರು ಸಾವನ್ನಪ್ಪಿದರು. ಈ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾದ ಆಶಿಶ್‌ಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಅಲ್ಲದೇ, ಹಿಂಸಾಚಾರದ ತನಿಖೆಯ ಮೇಲ್ವಿಚಾರಣೆಗಾಗಿ ಪಂಜಾಬ್ ಮತ್ತು ಹರಿಯಾಣದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ರಾಕೇಶ್ ಕುಮಾರ್ ಜೈನ್ ನೇತೃತ್ವದ ಸಮಿತಿಯನ್ನು ಸುಪ್ರೀಂಕೋರ್ಟ್ ನೇಮಿಸಿತ್ತು.
ಇದನ್ನೂ ಓದಿ: ಪ್ರಾರ್ಥಿಸಲು ಬಂದ ಬಾಲಕಿ ಮೇಲೆ ಚರ್ಚ್ ಪಾದ್ರಿ ಅತ್ಯಾಚಾರ, ಬಂಧನ