ನವದೆಹಲಿ: ಲಖೀಮ್ಪುರ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಬುಧವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ಇಂದು ವಿಚಾರಣೆ ನಡೆಸಲು ನಿರ್ಧರಿಸಿದೆ.
ಗುರುವಾರ ಬೆಳಿಗ್ಗೆ 11 ಗಂಟೆಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಾಮನ್ ನೇತೃತ್ವದ ಪೀಠವು ಲಖೀಮ್ಪುರ ಹಿಂಸಾಚಾರ ಪ್ರಕರಣದ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರದಲ್ಲಿ ಸಚಿವರ ಪುತ್ರ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವುದು ಹಾಗೂ ವಕೀಲರೊಬ್ಬರು ಈ ಬಗ್ಗೆ ಪತ್ರ ಬರೆದಿರುವುದರಿಂದ ಮತ್ತು ಮಾಧ್ಯಮಗಳ ವರದಿ ಆಧರಿಸಿ ಸುಪ್ರೀಂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಭಾನುವಾರ ನಡೆದ ಹಿಂಸಾಚಾರಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದರು. ಕೇಂದ್ರ ಸಚಿವರ ಪುತ್ರ ಕಾರು ಹರಿಸಿದ್ದರಿಂದ ರೈತರು ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಇನ್ನೊಂದೆಡೆ ಪ್ರಕರಣ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಜೊತೆಗೆ ಲಖೀಮ್ಪುರಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ಬುಧವಾರ ನೀಡಿ, ಸಾಂತ್ವನ ನೀಡಿದೆ.