ಮುಂಬೈ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಸಜ್ಜಾಗಿದೆ. ಮಹಾರಾಷ್ಟ್ರ ಸಚಿವ ಸಂಪುಟ ಕೈಗೊಂಡಿರುವ ಮೂರು ನಿರ್ಣಯಗಳಲ್ಲಿ ಇದೂ ಒಂದಾಗಿದೆ.
ಇಂದಿನಿಂದ ಮಹಾರಾಷ್ಟ್ರದಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಹಾಗಾಗಿ ಸರ್ಕಾರವು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಿದೆ. ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮರಾಠರ ಕೋಟಾವನ್ನು ಮರುಸ್ಥಾಪಿಸುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡುವ ನಿರ್ಣಯಕ್ಕೆ ಮಂತ್ರಿ ಮಂಡಲ ಅನುಮೋದನೆ ನೀಡಿದೆ.
2011 ರ ಜನಗಣತಿಯ ಆಧಾರದ ಮೇಲೆ ಒಬಿಸಿಗಳ ಜನಸಂಖ್ಯೆಯ ಡೇಟಾ ನೀಡುವಂತೆ ಕೇಂದ್ರವನ್ನು ಕೇಳಲಿದ್ದು, ಇದರಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಜನರಿಗೆ ರಾಜಕೀಯ ಮೀಸಲಾತಿ ನೀಡಬಹುದು. ಈ ಮೂರು ನಿರ್ಣಯಗಳನ್ನು ವಿಧಾನಸಭೆಯಲ್ಲಿ ಮಂಡಿಸಲು ಸಚಿವ ಸಂಪುಟ ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಜಾರಿಗೊಳಿಸಿರುವ ಮೂರು ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕಳೆದ ಎಂಟು ತಿಂಗಳಿಂದ ರೈತರು ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಕಾನೂನನ್ನು ಈ ವರ್ಷದ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ವಿವಿಧ ಸಮುದಾಯಗಳಿಗೆ ಮೀಸಲಿಟ್ಟಿರುವ ಒಟ್ಟು ಸೀಟುಗಳ ಸಂಖ್ಯೆ ತನ್ನ ಒಟ್ಟು ಸಾಮರ್ಥ್ಯದ ಶೇಕಡಾ 50 ಅನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಕೋಟಾವನ್ನು ರದ್ದುಗೊಳಿಸಿತ್ತು.