ಥಾಣೆ (ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆ ನಗರದ ಘೋಡ್‌ಬಂದರ್ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಮೋಟಾರ್ ಬೈಕ್ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ 30 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಗ್ಗೆ ಈ ಭೀಕರ ಅಪಘಾತ ಸಂಭವಿಸಿದೆ. ಪಿಲ್ಲರ್‌ಗೆ ಡಿಕ್ಕಿ ಹೊಡೆದ ನಂತರ, ವ್ಯಕ್ತಿ ತನ್ನ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಬೈಕ್ ಬೆಂಕಿಗೆ ಆಹುತಿಯಾಗಿದೆ ಎಂದು ಅವರು ತಿಳಿಸಿದರು.
ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಲು ಕ್ರಮಕೈಗೊಂಡಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಳಗ್ಗೆ 5.30 ರ ಸುಮಾರಿಗೆ ಅಪಘಾತದ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ" ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ಹೇಳಿದ್ದಾರೆ.
ಮರಣೋತ್ತರ ಪರೀಕ್ಷೆ: ''ಅಪಘಾತದ ರಭಸಕ್ಕೆ ಮೋಟಾರ್ ಬೈಕ್‌ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ವಿಪತ್ತು ನಿರ್ವಹಣಾ ಸೆಲ್ ತಂಡದ ಸದಸ್ಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ'' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನಿಖೆ ಆರಂಭಿಸಿದ ಪೊಲೀಸರು: ಅಪಘಾತಕ್ಕೆ ಕಾರಣ ಹಾಗೂ ವಾಹನದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಏಕೆ ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಅಪಘಾತದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿನ ಪ್ರಕರಣ, ಬೈಕ್ ಡಿಕ್ಕಿಯಾಗಿ ಯುವತಿ ಸಾವು: ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯಲ್ಲಿ ಇತ್ತೀಚೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿನಿಯರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿತ್ತು. ಇದರಿಂದ ಇಬ್ಬರು ವಿದ್ಯಾರ್ಥಿನಿಗಳ ಪೈಕಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಳು ಹಾಗೂ ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಳು. ಈ ಘಟನೆ ಜಿಲ್ಲೆಯ ಮುವಾಟ್ಟುಪುಳದ ಕಾಲೇಜು ಸಮೀಪ ಜರುಗಿತ್ತು.
ವೇಗವಾಗಿ ಬಂದರುವ ಬೈಕ್ ಡಿಕ್ಕಿ ಹೊಡೆದ್ದರಿಂದ ಕಾಲೇಜು ವಿದ್ಯಾರ್ಥಿಯೊಬ್ಬಳು ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿ ವಿರುದ್ಧ ಅನೈಚ್ಛಿಕ ಕೊಲೆ ಆರೋಪ ಹೊರಿಸಲಾಗಿತ್ತು. ಬೈಕ್ ಚಲಾಯಿಸುತ್ತಿದ್ದ ಎನನೆಲ್ಲೂರು ನಿವಾಸಿ, ಆರೋಪಿ ಅನ್ಸನ್ ರಾಯ್ (22) ಎಂಬು ಯುವಕನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದರು. ತನಿಖೆಯ ಪ್ರಕಾರ, ಈತ ಅತಿಯಾದ ವೇಗದಲ್ಲಿ ಅಪಾಯಕಾರಿಯಾಗಿ ಸವಾರಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೋಟಾರು ವಾಹನ ಇಲಾಖೆ ಕೂಡ ಅನ್ಸನ್ ರಾಯ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಅವರ ಪರವಾನಗಿ ರದ್ದುಪಡಿಸಲಾಗುವುದು ಎಂದು ಮೋಟಾರು ವಾಹನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ರಾಯಚೂರು: ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ, ವಿದ್ಯಾರ್ಥಿ ಸಾವು