ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಇಂದು ಸಂಜೆ 4 ಗಂಟೆ ಸುಮಾರಿಗೆ ಮೋದಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರನ್ನೂ ಸಹ ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಇದೆ.
ಬಂಗಾಳದ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕುತೂಹಲಕ್ಕೂ ಕಾರಣವಾಗಿದೆ. ಇತ್ತ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನೂ ಸಹ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಇವರಲ್ಲದೇ ಕಮಲ್ನಾಥ್, ಆನಂದ್ ಶರ್ಮಾ ಮತ್ತು ಅಭಿಷೇಕ್ ಮನು ಸಿಂಘ್ವಿಯನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. 2024ರ ಲೋಕಸಭೆ ಚುನಾವಣಾ ದೃಷ್ಟಿಯಿಂದ ಮಮತಾ ಬ್ಯಾನರ್ಜಿ ಭೇಟಿ ಇನ್ನಷ್ಟು ಮಹತ್ವ ಪಡೆದುಕೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ವಿಶೇಷ ಶಾಸಕಾಂಗ ಸಭೆ ನಡೆಸಿರುವ ಮಮತಾ ಬಳಿಕ ಅಲ್ಲಿಂದ ದೆಹಲಿಗೆ ಬಂದಿಳಿದಿದ್ದಾರೆ. ಮೋದಿ ಜೊತೆ ಸಭೆ ನಿಗದಿಯಾಗಿರುವ ಕುರಿತು ಅವರೇ ಮಾಹಿತಿ ನೀಡಿದ್ದಾರೆ. ಆದರೆ, ಸಮಯದ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಜೊತೆಗೆ ಮಾನ್ಸೂನ್ ಅಧಿವೇಶನ ಸಹ ನಡೆಯುತ್ತಿದ್ದು, ಸದನಕ್ಕೂ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೊಂದೆಡೆ ಪಶ್ಚಿಮ ಬಂಗಾಳದಲ್ಲಿ ನಕಲಿ ಕೋವಿಡ್ ಲಸಿಕೆ ಟೀಕೆಯಿಂದ ತಪ್ಪಿಸಿಕೊಳ್ಳಲು ಮಮತಾ ದೆಹಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಇದನ್ನೂ ಓದಿ: Pornography case: ರಾಜ್ಕುಂದ್ರಾ ಪೊಲೀಸ್ ಕಸ್ಟಡಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು!