ನವದೆಹಲಿ : ಹಿಂಸಾಚಾರಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲಾಗಿ ಮೆರವಣಿಗೆ ಮಾಡಿದ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೇಂದ್ರದ ಮನವಿಯ ಕುರಿತು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಸಿಜೆಐ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಅಷ್ಟೇ ಅಲ್ಲದೆ, ತಮ್ಮ ಗುರುತಿನ ರಕ್ಷಣೆ ಹಾಗೂ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಸಂತ್ರಸ್ತ ಮಹಿಳೆಯರಿಬ್ಬರು ಅರ್ಜಿ ಸಲ್ಲಿಸಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಮೇ 4ರಂದು ನಡೆದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಕುರಿತು ಅರ್ಜಿ ಸಲ್ಲಿಸಲಾಗಿದೆ. ಸಂತ್ರಸ್ತೆಯರು ರಾಜ್ಯ ಸರ್ಕಾರ ಮತ್ತು ಕೇಂದ್ರದ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : Manipur violence : ಮಹಿಳೆಯರ ಬೆತ್ತಲೆ ಮೆರವಣಿಗೆಗೂ ಮುನ್ನ ಜನರನ್ನು ಕೊಂದು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು: ಎಫ್ಐಆರ್ನಲ್ಲಿ ಉಲ್ಲೇಖ
ಇನ್ನೊಂದೆಡೆ, ಇಬ್ಬರು ಮಹಿಳೆಯರನ್ನು ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಘಟನೆಯ ವಿಡಿಯೋ ಜುಲೈ 19 ರಂದು ವೈರಲ್ ಆಗಿತ್ತು. ಅಮಾನವೀಯ ದುಷ್ಕೃತ್ಯ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಜುಲೈ 27 ರಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, ಅದರಲ್ಲಿ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಲಿದೆ ಎಂದು ತಿಳಿಸಿದೆ. 'ರಾಜ್ಯ ಸರ್ಕಾರದ ಒಪ್ಪಿಗೆಯೊಂದಿಗೆ ಕೇಂದ್ರ ಸರ್ಕಾರವು ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸುವ ನಿರ್ಧಾರ ತೆಗೆದುಕೊಂಡಿದೆ' ಎಂದು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಮೂಲಕ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲಾಗಿದೆ.
ಇದನ್ನೂ ಓದಿ : ಬುಡಕಟ್ಟು ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣ : ನಾಲ್ವರ ಬಂಧನ, ಅಪರಾಧಿಗಳಿಗೆ ಮರಣದಂಡನೆಯೇ ಸೂಕ್ತ ಎಂದ ಮಣಿಪುರ ಸಿಎಂ
ಮೇ 3ರಂದು ಮಣಿಪುರದಲ್ಲಿ ಆರಂಭವಾದ ಹಿಂಸಾಚಾರ ನಿಲ್ಲುವ ಹಾಗೆ ಕಾಣುತ್ತಿಲ್ಲ. ಎರಡು ತಿಂಗಳು ಕಳೆದರೂ ಅದೇ ಸ್ಥಿತಿ ಮುಂದುವರೆದಿದೆ. ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದೆ. ಆದರೆ, ಪ್ರಕರಣದ ವಿಚಾರಣೆಯನ್ನು ಮಣಿಪುರದಿಂದ ಸ್ಥಳಾಂತರಿಸುವಂತೆ ಕೇಂದ್ರ ಸರ್ಕಾರ ಒತ್ತಾಯಿಸಿದೆ. ಜೊತೆಗೆ, 6 ತಿಂಗಳೊಳಗೆ ದೋಷಾರೋಪ ಪಟ್ಟಿ ಸಲ್ಲಿಸುವಂತೆ ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು ಎಂಬ ಬೇಡಿಕೆಯೂ ಇದೆ. ಆದಾಗ್ಯೂ, ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ನಿರಂತರ ಮಾತುಕತೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಇದನ್ನೂ ಓದಿ : Manipur Violence : ಮಣಿಪುರದಲ್ಲಿ 10 ಮನೆಗಳು, ಶಾಲೆಗೆ ಬೆಂಕಿ ಹಚ್ಚಿದ ಶಸ್ತ್ರಸಜ್ಜಿತ ಮಹಿಳಾ ಬಂಡುಕೋರರ ಗುಂಪು