ನವದೆಹಲಿ : ಮಣಿಪುರ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರದಿಂದ ನಲುಗಿ ಹೋಗಿದ್ದು, ಇಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಕುರಿತು ವಿಚಾರಣೆ ನಡೆಯಿತು. ಪರಿಸ್ಥಿತಿಯ ಭೀಕರತೆ ಅರಿತ ಕೋರ್ಟ್, ಈಶಾನ್ಯ ರಾಜ್ಯದಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ನೋಡಿಕೊಳ್ಳಲು ಮೂವರು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಸಮಿತಿ ರಚಿಸಿ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮಾತನಾಡಿ, "ಈ ಸಮಿತಿಗೆ ಜಮ್ಮು ಕಾಶ್ಮೀರ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಗೀತಾ ಮಿತ್ತಲ್ ಅಧ್ಯಕ್ಷರಾಗಿರಲಿದ್ದು, ನ್ಯಾ.ಶಾಲಿನಿ ಪಿ.ಜೋಶಿ ಮತ್ತು ನ್ಯಾ. ಆಶಾ ಮೋಹನ್ ಸಮಿತಿಯಲ್ಲಿರಲಿದ್ದಾರೆ" ಎಂದು ತಿಳಿಸಿದರು.
ಇದಕ್ಕೂ ಮುನ್ನ, ಪ್ರಕರಣಗಳ ತನಿಖೆ ನಡೆಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಗಳನ್ನು (ಎಸ್‌ಐಟಿ) ರಚಿಸಲು ಮಣಿಪುರ ಸರ್ಕಾರ ಪ್ರಸ್ತಾಪ ಮುಂದಿಟ್ಟಿತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಮಣಿಪುರ ಡಿಜಿಪಿ ರಾಜೀವ್ ಸಿಂಗ್ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಜನಾಂಗೀಯ ಹಿಂಸಾಚಾರದ ಬಗ್ಗೆ ಮತ್ತು ಈವರೆಗೆ ಕೈಗೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ಅವರು ವಿವರಣೆ ನೀಡಿದರು.
ಆಗಸ್ಟ್ 1ರಂದು ಮಣಿಪುರ ಹಿಂಸಾಚಾರ ಪ್ರಕರಣ ಮತ್ತು ಪ್ರಕರಣಗಳನ್ನು ಪ್ರತ್ಯೇಕಿಸಿರುವ ಬಗ್ಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ, ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು ವರದಿ ಸಲ್ಲಿಸಿದರು.
ಈ ವೇಳೆ ಸರ್ಕಾರವು ಹಿಂಸಾಚಾರ ಪರಿಸ್ಥಿತಿಯನ್ನು ಅತ್ಯಂತ ಪ್ರಬುದ್ಧ ಮಟ್ಟದಲ್ಲಿ ನಿಭಾಯಿಸುತ್ತಿದೆ ಎಂದು ಅಟಾರ್ನಿ ಜನರಲ್ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು. ಸೂಕ್ಷ್ಮ ಪ್ರಕರಣಗಳ ತನಿಖೆಗಾಗಿ ಜಿಲ್ಲಾ ಮಟ್ಟದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಗಳನ್ನು(ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ಪ್ರಸ್ತಾಪ ಇಟ್ಟಿದೆ. ಇದರಲ್ಲಿ 11 ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲಿದೆ ಎಂದು ಹೇಳಿದರು.
ಆಗಸ್ಟ್ 1ರಂದು ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಂವಿಧಾನಿಕತೆ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಜನಾಂಗೀಯ ಹಿಂಸಾಚಾರದ ಬಗ್ಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರನ್ನು ಗುರಿಯಾಗಿಸಿ ನಡೆದ ಪ್ರಕರಣಗಳ ತನಿಖೆಯಲ್ಲಿ ವಿಳಂಬ ಮಾಡಿದ್ದಕ್ಕೆ ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ನ ಪ್ರಶ್ನೆಗಳಿಗೆ ಉತ್ತರಿಸಲು ಆಗಸ್ಟ್ 7ರಂದು ಡಿಜಿಪಿ ಅವರಿಗೆ ಸಮನ್ಸ್ ನೀಡಲಾಗಿತ್ತು.
6,523 ಪ್ರಕರಣಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ 11 ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಬಹುದು ಎಂದು ಕೇಂದ್ರವು ಪೀಠವನ್ನು ಒತ್ತಾಯಿಸಿದೆ. ಹಿಂಸಾಚಾರಕ್ಕೆ ಸಂಬಂಧಿಸಿದ ಸುಮಾರು 10 ಅರ್ಜಿಗಳ ವಿಚಾರಣೆಯನ್ನು ನ್ಯಾಯಪೀಠ ನಡೆಸುತ್ತಿದೆ.
ಇದನ್ನೂ ಓದಿ : ಹರಿಯಾಣದ ಹಿಂಸಾಚಾರ ಪ್ರಕರಣ.. ಒಟ್ಟು 156 ಜನರ ಬಂಧನ