ಏಲೂರು(ಆಂಧ್ರಪ್ರದೇಶ): ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿ, ಸುಮಾರು 6 ಮಂದಿ ಸಾವನ್ನಪ್ಪಿ 13 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಮಾಸುನೂರು ವಲಯದ ಅಕ್ಕಿರೆಡ್ಡಿಗುಡೆಂನಲ್ಲಿ ಸಂಭವಿಸಿದೆ. ಪೋರಸ್ ಎಂಬ ಹೆಸರಿನ ರಾಸಾಯನಿಕ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದು, ಮತ್ತೊಬ್ಬರು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ನೂಜಿವೀಡು ಆಸ್ಪತ್ರೆಗೆ ರವಾನಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗಿದೆ.
ಅಗ್ನಿ ಅವಘಡ ಸಂಭವಿಸುವ ವೇಳೆ 150 ಮಂದಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ದೊರಕಿದೆ. ಅದೃಷ್ಟವಶಾತ್ ಸಾಕಷ್ಟು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಏಲೂರು ಎಸ್ಪಿ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. aಪಘಾತಕ್ಕೆ ಕಾರಣ ಹಾಗೂ ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ. ಫಾರ್ಮಾಸ್ಯುಟಿಕಲ್ಸ್ ತಯಾರಿಕೆಯಲ್ಲಿ ಬಳಸುವ ಪುಡಿಯನ್ನು ಪೋರಸ್ ಕಾರ್ಖಾನೆಯಲ್ಲಿ ಉತ್ಪಾದಿಸಲಾಗುತ್ತಿತ್ತು ಎಂಬುದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ.
ಈ ಕುರಿತು ಮಾಹಿತಿ ನೀಡಿದ ಸಂತ್ರಸ್ತರೊಬ್ಬರು 'ಈಟಿವಿ ಭಾರತ'ದೊಂದಿಗೆ ಮಾತನಾಡಿದ್ದು, ಒಮ್ಮೆಲೇ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿತು. ಕಾರ್ಖಾನೆ ಮಾಲೀಕರ ನಿರ್ಲಕ್ಷ್ಯದಿಂದಲೇ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಕಂಪನಿ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಯಾರೂ ಕೂಡ ಆ್ಯಂಬುಲೆನ್ಸ್‌ಗೆ ಕರೆ ಮಾಡಲಿಲ್ಲ. 150 ಜನರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ವಿಷಪೂರಿತ ಅಣಬೆ ಸೇವನೆ: ಒಂದೇ ವಾರದಲ್ಲಿ 13 ಮಂದಿ ಸಾವು, 39 ಜನರು ಆಸ್ಪತ್ರೆಗೆ ದಾಖಲು