ನವದೆಹಲಿ: ಜಮ್ಮುವಿನ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ಮಂದಿರದಲ್ಲಿ ನಡೆದಿರುವ ಕಾಲ್ತುಳಿತದ ದುರಂತಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಣ್ಯರು ಕಂಬನಿ ಮಿಡಿದಿದ್ದಾರೆ.
ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಭವನದಲ್ಲಿ ನಡೆದಿರುವ ಘಟನೆ ದುರದೃಷ್ಟಕರ. ಕಾಲ್ತುಳಿತದಲ್ಲಿ 12 ಮಂದಿ ಭಕ್ತರು ಪ್ರಾಣ ಕಳೆದುಕೊಂಡಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸುತ್ತೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಕಂಬನಿ ಮಿಡಿದಿದ್ದು, ಮಾತಾ ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣಹಾನಿಯಾಗಿರುವುದು ತೀವ್ರ ದುಃಖವಾಗಿದೆ. ಮೃತ ಕುಟುಂಬಗಳಿಗೆ ಸಂತಾಪ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದು, ಜಮ್ಮು-ಕಾಶ್ಮೀರದ ಎಲ್‌ಜಿ ಮನೋಜ್ ಸಿನ್ಹಾ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಆದೇಶ
ಮಾತಾ ವೈಷ್ಣೋದೇವಿ ಮಂದಿರದಲ್ಲಿ ಇಂದು ಮುಂಜಾನೆ ನಡೆದಿದ್ದ ಕಾಲ್ತುಳಿತದಲ್ಲಿ 12 ಮಂದಿ ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಎಲ್‌ಜಿ ಘಟನೆ ಸಂಬಂಧ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ ಎಲ್ಲಾ ರೀತಿಯ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ ಎಂದು ಮನೋಜ್ ಸಿನ್ಹಾ ಅವರು ಟ್ವೀಟ್ ಮಾಡಿದ್ದಾರೆ.
ಜಮ್ಮು-ಕಾಶ್ಮೀರದ ಉದ್ಧಾಂಪುರ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಕತ್ರಾಗೆ ತೆರಳಿದ್ದು, ಖುದ್ದು ಸ್ಥಳಕ್ಕೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ನಾನು ಕೂಡಲೇ ಸ್ಥಳಕ್ಕೆ ತೆರಳುತ್ತಿದ್ದು, ಪರಿಸ್ಥಿತಿಯ ಅವಲೋಕನ ಮಾಡಿ ಮಾಹಿತಿ ಮೋದಿ ಅವರಿಗೆ ಮಾಹಿತಿ ನೀಡುವುದಾಗಿ ಸಿಂಗ್ ಟ್ವೀಟ್ ಮಾಡಿದ್ದಾರೆ.
ಘಟನೆ ಬಗ್ಗೆ ಅಮಿತ್ ಶಾ ಕಳವಳ
ಘಟನೆ ಅತ್ಯಂತ ದುಃಖಕರವಾಗಿದ್ದು, ಈ ಸಂಬಂಧ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಕೊಡಿಸುವಂತೆ ಸೂಚಿಸಿರುವುದಾಗಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಸಂತಾಪ
ದುರಂತಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸಂತಾಪ ಸೂಚಿಸಿದ್ದು, ಮಾತಾ ವೈಷ್ಣೋ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಹಾರೈಸಿ ಟ್ವೀಟ್ ಮಾಡಿದ್ದಾರೆ.
ಹೊಸ ವರ್ಷದ ಮೊದಲ ದಿನದಂದೇ ಜಮ್ಮುವಿನ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ಮಂದಿರದ ಕಟ್ಟಡದ ಬಳಿಯಿರುವ ಮಾತಾ ವೈಷ್ಣೋದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 12 ಮಂದಿ ಸಾವನ್ನಪ್ಪಿದರೆ, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 2022ರ ಮೊದಲ ದಿನವೇ ಇದು ಘೋರ ದುರಂತವಾಗಿದೆ.
ಇದನ್ನೂ ಓದಿ: ಹೊಸ ವರ್ಷದಂದೇ ದುರಂತ: ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 12 ಮಂದಿ ಸಾವು, 20 ಮಂದಿಗೆ ಗಾಯ