ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಮುಖಾಮುಖಿ ಗುಂಡಿನ ದಾಳಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಕನಿಗಮ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೇನಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಯೋಧರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯ ಯೋಧರು ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಉಗ್ರ ಹತ್ಯೆಯಾಗಿದ್ದಾನೆ.
ಜೊತೆಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹತ್ಯೆಗೀಡಾದ ಉಗ್ರನ ಗುರುತು ಮತ್ತು ಸಂಘಟನೆಗಳ ಜೊತೆಗಿನ ಸಂಬಂಧವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಡಿಸೆಂಬರ್ 9ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಲ್ ಬದ್ರ್ ಉಗ್ರರು ಸಾವನ್ನಪ್ಪಿದ್ದರು.
ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಅಡಗುತಾಣಗಳು ಪತ್ತೆ: ಮುಂದುವರಿದ ಶೋಧಕಾರ್ಯ