ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಮೂಲಕ ನುಸುಳಲು ಯತ್ನಿಸಿದ ಉಗ್ರನೋರ್ವನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಆದರೆ ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ತಡರಾತ್ರಿ ದಕ್ಷಿಣ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಕೆಲ ವ್ಯಕ್ತಿಗಳ ಅನುಮಾನಾಸ್ಪದ ಚಲನೆ ಗಮನಿಸಿದ ಭಾರತೀಯ ಸೇನೆಯ ಗಸ್ತು ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಮಾಹಿತಿ ನೀಡಿದ್ದಾರೆ.
ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು,ಉಗ್ರನನ್ನು ಸದೆಬಡಿಯಲಾಗಿದೆ. ಮೃತ ಉಗ್ರನ ಬಳಿ ಇದ್ದ ಎಕೆ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ರಾಜೇಶ್ ಕಾಲಿಯಾ ತಿಳಿಸಿದ್ದಾರೆ.