ಇಸ್ಲಾಮಾಬಾದ್ (ಪಾಕಿಸ್ತಾನ): ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಏಳು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ.
ಶನಿವಾರ ತಡರಾತ್ರಿ ಬಲೂಚಿಸ್ತಾನ್ ಪ್ರಾಂತ್ಯದ ಹರ್ನೈ ಪ್ರದೇಶದಲ್ಲಿ ಭಯೋತ್ಪಾದಕರು ಫ್ರಾಂಟಿಯರ್ ಕಾರ್ಪ್ಸ್ (ಎಫ್‌ಸಿ) ಹೊರಠಾಣೆ ಮೇಲೆ ದಾಳಿ ಮಾಡಿದ್ದು, ಗುಂಡಿನ ಚಕಮಕಿಯಲ್ಲಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಘಟನೆಯ ನಂತರ ಭಯೋತ್ಪಾದಕರನ್ನು ಸೆರೆ ಹಿಡಿಯಲು ಪಾಕ್ ಸೇನೆ ಪ್ರದೇಶವನ್ನು ಸುತ್ತುವರಿದಿದ್ದು, ಸಾಕಷ್ಟು ಮಾರ್ಗಗಳನ್ನು ನಿರ್ಬಂಧಿಸಲಾಗಿದೆ. ಭಯೋತ್ಪಾದಕರಿಗಾಗಿ ಶೋಧ ಕಾರ್ಯ ತೀವ್ರವಾಗಿ ನಡೆಯುತ್ತಿದೆ.
ಓದಿ: ವಿಶೇಷ ಅಂಕಣ: ಭಾರತ-ಚೀನಾದ ಪ್ರಸ್ತುತ ಸ್ಥಿತಿಗತಿಯಲ್ಲಿ ಪಾಕಿಸ್ತಾನದ ಪಾತ್ರ ಏನು..?
ಬಲೂಚಿಸ್ತಾನದಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ಹಾಳುಮಾಡಲು ದೇಶ ವಿರೋಧಿ ಪಡೆಗಳು ನಡೆಸುವ ಈ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಈ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕ್ ಪ್ರಧಾನಿ ಇಮ್ರಾನ್ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ ಹಾಗೂ ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಐದು ದಿನಗಳ ಹಿಂದೆ ಈ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು 10 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದು, ಬಲೂಚ್ ರಾಷ್ಟ್ರೀಯವಾದಿ ಸಂಘಟನೆಗಳೊಂದಿಗೆ ಬೆರೆತಿರುವ ಭಯೋತ್ಪಾದಕರು ಆಗಾಗ ದಾಳಿ ನಡೆಸುತ್ತಿರುತ್ತಾರೆ.