ಕೋಲ್ಕತಾ: ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ರ‍್ಯಾಲಿ ನಡೆಸಲಿದ್ದು, ಈ ಸಮಾವೇಶದಲ್ಲಿ ಮೆಗಾಸ್ಟಾರ್ ಮಿಥುನ್ ಚಕ್ರವರ್ತಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆ ಮಾರ್ಚ್ 7 ರಂದು ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶ ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. ಇದೇ ಸಮಾವೇಶದಲ್ಲಿ ಮಿಥುನ್ ಚಕ್ರವರ್ತಿ ಸಹ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಿಥುನ್ ಅವರೊಂದಿಗೆ ಸಭೆ ನಡೆಸಿದ್ದರು. ಅಂದಿನಿಂದ ಮಿಥುನ್ ಚಕ್ರವರ್ತಿ ಅವರು ಶೀಘ್ರದಲ್ಲೇ ಬಿಜೆಪಿ ಸೇರುತ್ತಾರೆಂಬ ವದಂತಿಗಳು ಹರಿದಾಡುತ್ತಿದ್ದವು. ಈ ವದಂತಿಗಳಿಗೆ ಮಿಥುನ್ ಪ್ರತಿಕ್ರಿಯೆ ನೀಡಿದ್ದು, ಸದ್ಯಕ್ಕೆ ನಾನು ಬಿಜೆಪಿಗೆ ಸೇರುವುದಿಲ್ಲ, ಆದರೆ ಬ್ರಿಗೇಡ್ ಮೈದಾನದಲ್ಲಿ ನಡೆಯುತ್ತಿರುವ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತೇನೆಂದು ತಿಳಿಸಿದ್ದಾರೆಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ.
ಈಗಾಗಲೇ ವೇಳಾಪಟ್ಟಿ ಪ್ರಕಟವಾಗಿದ್ದು, ಪಶ್ಚಿಮ ಬಂಗಾಳದ 294 ವಿಧಾನಸಭಾ ಸ್ಥಾನಗಳ ಚುನಾವಣೆ ಮಾರ್ಚ್ 27 ರಿಂದ ಪ್ರಾರಂಭವಾಗಲಿದೆ. ಒಟ್ಟು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ.