ಚೆನ್ನೈ (ತಮಿಳುನಾಡು): ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ತಮ್ಮ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಚೆನ್ನೈನಲ್ಲಿರುವ ಅವರ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಇನ್ನು ಇದೇ ವೇಳೆ ಆ್ಯನ್ನಾ ಸ್ಮಾರಕದಲ್ಲಿರುವ ಪಕ್ಷದ ಸ್ಥಾಪಕ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸಿ.ಎನ್.ಅಣ್ಣಾದುರೈ ಅವರಿಗೂ ಗೌರವ ಸಲ್ಲಿಸಿದರು.
ಸ್ಟಾಲಿನ್ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಲತೂರ್ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಅರಿವಲಯಂನ ಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಈ ಬಗ್ಗೆ ತಿಳಿಸಿದ್ದಾರೆ. ಇನ್ನು ಈ ಬಾರಿಯೂ ಕೊಲತೂರ್ ಕ್ಷೇತ್ರದಿಂದ ಸ್ಪರ್ಧಿಸಿದರೆ, ಸತತ ಮೂರನೇ ಬಾರಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿದಂತಾಗುತ್ತದೆ.
234 ಸದಸ್ಯರ ತಮಿಳುನಾಡು ವಿಧಾನಸಭಾ ಚುನಾವಣೆ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ನಡೆಯಲಿದೆ.