ನವದೆಹಲಿ: ಬಾಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಉಭಯ ರಾಷ್ಟ್ರಗಳ ಸಂಬಂಧಗಳ ಕುರಿತು ಮಾತುಕತೆ ನಡೆಸಿದ್ದಾರೆ. ಈ ವೇಳೆ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನ ಸೇರಿದಂತೆ ಹಲವು ವಲಯಗಳ ಸಹಕಾರ ಕುರಿತು ಚರ್ಚೆ ನಡೆಸಲಾಗಿದೆ.
ಕ್ವಾಡ್ ಮತ್ತು I2U2 ನಂತಹ ಹೊಸ ಗುಂಪುಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಸಹಕಾರದ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ. ಜಾಗತಿಕ ಮತ್ತು ಪ್ರಾದೇಶಿಕ ಅಭಿವೃದ್ಧಿ ಬಗ್ಗೆ ಕೂಡ ಉಭಯ ರಾಷ್ಟ್ರ ನಾಯಕರು ಚರ್ಚೆ ನಡೆಸಿದ್ದಾರೆ. ಭಾರತ ಮತ್ತು ಅಮೆರಿಕ ಸಹಭಾಗಿತ್ವವನ್ನು ಗಟ್ಟಿಗೊಳಿಸಲು ಬೆಂಬಲ ನೀಡಿದ್ದಲ್ಲೇ ಪ್ರಧಾನಿ ಮೋದಿ ಅವರು ಜೋ ಬೈಡನ್ಗೆ ಧನ್ಯವಾದ ತಿಳಿಸಿದ್ದಾರೆ.
ಇನ್ನು ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲೂ ಭಾರತ ಅಮೆರಿಕ ಇದೇ ರೀತಿ ಸಹಕಾರ ನಿರ್ವಹಿಸಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ವರ್ಷ ಅಂದರೆ 2023ರ ನವೆಂಬರ್ 20ರಿಂದ ಡಿಸೆಂಬರ್ 1ರವರೆಗೆ ನಡೆಯಲಿರುವ ಜಿ 20 ಶೃಂಗಸಭೆಗೆ ಭಾರತ ಆತಿಥ್ಯ ವಹಿಸಲು ಸಿದ್ಧತೆ ನಡೆಸಿದೆ.
ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: ಕದನ ವಿರಾಮ ಘೋಷಿಸಲು ಜಿ 20 ಶೃಂಗಸಭೆಯಲ್ಲಿ ಮೋದಿ ಕರೆ