ಶ್ರೀಕಾಕುಳಂ (ಆಂಧ್ರ ಪ್ರದೇಶ): ಆಂಧ್ರ ಪ್ರದೇಶದ ಶ್ರೀಕಾಕುಳಂ ಐಐಐಟಿಯಲ್ಲಿ ಕಳೆದ ಮೂರು ದಿನಗಳಿಂದ ನೂರಾರು ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದುವರೆಗೆ 300ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಹಲವರು ಹೊಟ್ಟೆನೋವು ಮತ್ತು ವಾಂತಿಯಿಂದ ಬಳಲುತ್ತಿದ್ದು, ಐಐಐಟಿ ಆವರಣದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀಕಾಕುಳಂ ಐಐಐಟಿಯಲ್ಲಿ ದೇಶದ ವಿವಿಧ ಭಾಗಗಳ ಅಂದಾಜು 4,200 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಗುರುವಾರದಿಂದಲೂ ಅನೇಕ ವಿದ್ಯಾರ್ಥಿಗಳು ಹೊಟ್ಟೆನೋವು ಮತ್ತು ವಾಂತಿ ರೋಗಲಕ್ಷಣಗಳಿಂದ ಬಳಲುತ್ತಿದ್ದು, ಶನಿವಾರ ಬೆಳಗ್ಗೆ ಇನ್ನೂ 30 ಜನರು ಅಸ್ವಸ್ಥರಾಗಿದ್ದಾರೆ. ಇವರಲ್ಲಿ ನಾಲ್ವರನ್ನು ಶ್ರೀಕಾಕುಳಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಷ್ಟೆಲ್ಲ ನಡೆದರೂ ಆಡಳಿತಾಧಿಕಾರಿಗಳು ಪೋಷಕರಿಗೆ ಹಾಗೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೆ ಗೌಪ್ಯವಾಗಿಟ್ಟಿದ್ದರು ಎಂದು ಆರೋಪಿಸಲಾಗಿದೆ.
ಚಪಾತಿ ಮತ್ತು ಹಾಳಾದ ಮೊಟ್ಟೆಗಳ ಸೇವನೆಯಿಂದ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸಂಸದ ಬೆಲ್ಲಣ್ಣ ಚಂದ್ರಶೇಖರ್, ಸಚಿವ ಬೋತ್ಸಾ ಸತ್ಯನಾರಾಯಣ, ಜಿಲ್ಲಾಧಿಕಾರಿ ಶ್ರೀಕೇಶ್ ಬಿ.ಲಾಠ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಐಐಐಟಿ ಆವರಣಕ್ಕೆ ಭೇಟಿ ನೀಡಿ, ವಸತಿ ನಿಲಯಗಳು ಮತ್ತು ತರಗತಿಯ ಕೊಠಡಿಗಳನ್ನು ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿರುವ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದ್ದು, ಯಾರೂ ಆತಂಕ ಪಡಬೇಕಾಗಿಲ್ಲ. ಕಲುಷಿತ ನೀರು ಮತ್ತು ಆಹಾರ ಸೇವೆನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಒಳಗಾಗಿದ್ದಾರೆಯೇ ಎಂದು ತಿಳಿಯಲು ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ, ಐಐಐಟಿಯ ಕುಲಪತಿ ಕೆ.ಸಿ.ರೆಡ್ಡಿ ಮಾತನಾಡಿ, ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಿರಿಯ ಮಗನಿಗಾಗಿ 12 ವರ್ಷದ ಮಗಳನ್ನು ಬಲಿ ಪಡೆದ ತಾಯಿ!