ರೇವಾ(ಮಧ್ಯಪ್ರದೇಶ): ಇಬ್ಬರು ಹೆಣ್ಣು ಮಕ್ಕಳ ಕೊಲೆ ಮಾಡಿ ತಾಯಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.
ಸೋಹಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಾಯಿಯೊಬ್ಬಳು ಇಬ್ಬರು ಹೆಣ್ಣು ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಇದಾದ ಬಳಿಕ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾಳೆ.
ಸ್ಥಳೀಯರು ನೀಡಿರುವ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತಲುಪಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಮಾನಸಿಕ ಖಿನ್ನತೆಗೊಳಗಾಗಿದ್ದ ಮಹಿಳೆ ಯಾವಾಗಲೂ ದೇವರ ಪೂಜೆ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಮಹಿಳೆ ಮನೆಯಿಂದ ಹೊರಬಾರದ ಕಾರಣ ಪಕ್ಕದ ಮನೆಯವರಿಗೆ ಅನುಮಾನ ಮೂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತಲುಪಿದ ಪೊಲೀಸರು ಮನೆಯೊಳಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.