ಭೋಪಾಲ್: ಮಧ್ಯಪ್ರದೇಶದ ಮೈಹಾರ್ (ಸಾತ್ನಾ) ಜಿಲ್ಲೆಯ ಪ್ರಸಿದ್ಧ ದೇವಸ್ಥಾನದ ಆವರಣದಲ್ಲಿ 10 ವರ್ಷದ ಬಾಲಕಿಯೊಬ್ಬಳ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಗುರುವಾರ ಈ ದುಷ್ಕೃತ್ಯ ನಡೆದಿದ್ದು ಶುಕ್ರವಾರ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕಾಮುಕರ ಅಟ್ಟಹಾಸವು ಎಲ್ಲೆ ಮೀರಿದ್ದು, ದೆಹಲಿಯ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಗೆ ಆಮಿಷವೊಡ್ಡಿದ ಆರೋಪಿಗಳು, ಅವಳನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಬಾಲಕಿಯು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಹತ್ತಿರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೈಹಾರ್ ಉಪವಿಭಾಗದ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಲೋಕೇಶ್ ದಬರ್ ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಬಂದಾಗ ಬಾಲಕಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ತಕ್ಷಣ ನಾವು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದೆವು. ಗಂಭೀರ ಗಾಯ ಹಾಗೂ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ರೇವಾದ ಸಂಜಯ್ ಗಾಂಧಿ ಆಸ್ಪತ್ರೆಗೆ ರವಾನಿಸಿದ್ದೇವೆ. ವೈದ್ಯರಿಂದ ಇನ್ನೂ ಅಂತಿಮ ವರದಿ ಬಂದಿಲ್ಲ. ಆದರೆ, ಆಕೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಆರೋಪಿಗಳಿಬ್ಬರೂ ಸುಮಾರು 25-30 ವರ್ಷ ವಯಸ್ಸಿನವರಾಗಿದ್ದು, ದೇವಸ್ಥಾನ ಸಮಿತಿಯ ನೌಕರರೆಂದು ಶಾಸಕ ನಾರಾಯಣ ತ್ರಿಪಾಠಿ ತಿಳಿಸಿದ್ದಾರೆ. ದೇವಸ್ಥಾನದ ಆವರಣದಲ್ಲಿ ಇಂತಹ ಘಟನೆ ನಡೆದಿರುವುದು ಘೋರ ದುರಂತ. ಆರೋಪಿಗಳು ದೇವಸ್ಥಾನ ಸಮಿತಿಗೆ ಸೇರಿದವರು ಎಂಬುದು ಕಳವಳಕಾರಿ ಸಂಗತಿ. ಪ್ರಕರಣವದ ಗಂಭೀರತೆ ಅರಿತು ಸೂಕ್ತ ತನಿಖೆ ಮಾಡಬೇಕು. ಅಲ್ಲದೇ ಕೃತ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ತ್ರಿಪಾಠಿ ಒತ್ತಾಯ ಮಾಡಿದ್ದಾರೆ.
ಬಾಲಕಿಯ ಪೋಷಕರು ಅದೇ ದೇವಸ್ಥಾನ ಮುಂದೆ ಪುಟ್ಟ ಅಂಗಡಿಯನ್ನು ಇಟ್ಟುಕೊಂಡಿದ್ದು ಬುಡಕಟ್ಟು ಕುಟುಂಬಕ್ಕೆ ಸೇರಿದವರಾಗಿದ್ದಾರೆ. ರಾಜ್ಯದಲ್ಲಿ ಕೆಲವು ತಿಂಗಳಲ್ಲಿಯೇ ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಘಟನೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
''ಮಧ್ಯಪ್ರದೇಶದ ಈ ಘಟನೆಯುವ ದೆಹಲಿಯ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಿದೆ'' ಎಂದು ರಾಜ್ಯ ಕಾಂಗ್ರೆಸ್ ಮಾಧ್ಯಮ ಉಸ್ತುವಾರಿ ಕೆ.ಕೆ.ಮಿಶ್ರಾ ಹೇಳಿದ್ದಾರೆ. ಘಟನೆಯನ್ನು ಖಂಡಿಸಿರುವ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್, ''ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಅಮಾನವೀಯ ಕೃತ್ಯ ರಾಜ್ಯದಲ್ಲಿ ಮತ್ತೆ ನಡೆದಿರುವುದು ದುರಂತ. ರಾಜ್ಯ ಸರ್ಕಾರ ಮಕ್ಕಳಿಗೆ ಹಾಗೂ ಸ್ತ್ರೀಯರಿಗೆ ಭದ್ರತೆಯನ್ನು ಒದಗಿಸುವಲ್ಲಿ ವಿಫಲವಾಗಿದೆ'' ಎಂದು ನಾಥ್ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ಹಾಗೂ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಬೇಕು ಎಂದು ಸಹ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಬಾಲಕಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: Delhi Woman Killed: ದೆಹಲಿಯಲ್ಲಿ ಮಹಿಳೆಯನ್ನು ಗುಂಡಿಕ್ಕಿ ಹತ್ಯೆಗೈದು ಯುವಕ ಆತ್ಮಹತ್ಯೆ