ಲಖನೌ (ಉತ್ತರ ಪ್ರದೇಶ): ಸಮಾಜವಾದಿ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ.
82 ವರ್ಷದ ಮುಲಾಯಂ ಸಿಂಗ್ ಅವರು ಹಲವು ದಿನಗಳಿಂದ ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ರವಿವಾರ ಅವರ ಆರೋಗ್ಯ ಸ್ಥಿತಿ ಗಂಭೀರವಾದ ನಂತರ ಐಸಿಯುಗೆ ಸ್ಥಳಾಂತರಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಮುಲಾಯಂ ಸಿಂಗ್ ಅವರ ಪುತ್ರ ಅಖಿಲೇಶ್ ಯಾದವ್ ತಂದೆಯ ಆರೋಗ್ಯ ಹದಗೆಟ್ಟಿರುವ ಬಗ್ಗೆ ಮಾಹಿತಿ ಪಡೆದ ನಂತರ ಕುಟುಂಬ ಸದಸ್ಯರೊಂದಿಗೆ ದೆಹಲಿಗೆ ತೆರಳಿದ್ದಾರೆ. ಮುಲಾಯಂ ಅವರ ಸಹೋದರ ಶಿವಪಾಲ್ ಸಿಂಗ್ ಯಾದವ್, ಮುಲಾಯಂ ಅವರ ಸೊಸೆ ಅಪರ್ಣಾ ಯಾದವ್ ಕೂಡ ದೆಹಲಿ ತಲುಪಿದ್ದಾರೆ. ಮುಲಾಯಂ ಸಿಂಗ್ ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ ಎಂದು ಗೊತ್ತಾಗಿದೆ.
ಮುಲಾಯಂ ಸಿಂಗ್ ಯಾದವ್ ಉತ್ತಮ ಆರೋಗ್ಯಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾರೈಸಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಜೀವ ಬೆದರಿಕೆ: ಆತ್ಮಾಹುತಿ ಸ್ಫೋಟದ ಎಚ್ಚರಿಕೆ