ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹಾಗೂ ಒಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾದ ಏರಿಕೆ ಕಂಡು ಬರುತ್ತಿದೆ. ಇದೇ ಕಾರಣಕ್ಕಾಗಿ ಈಗಾಗಲೇ ಅನೇಕ ರೀತಿಯ ಕಠಿಣ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಇದೀಗ ಗೃಹ ಇಲಾಖೆ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.
ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 50ರಿಂದ 60 ವರ್ಷದೊಳಗಿನ ಮುಂಬೈ ಪೊಲೀಸರಿಗೆ ವರ್ಕ್ ಫ್ರಮ್ ಹೋಮ್ ನೀಡಲು ಇಲಾಖೆ ಮುಂದಾಗಿದೆ. ಮುಂಬೈನ ವಿವಿಧ ಜನಸಂದಣಿ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗದಂತೆ ಪೊಲೀಸ್ ಸಿಬ್ಬಂದಿಗೆ ಸೂಚಿಸಲಾಗಿದೆ.
ಪ್ರಮುಖವಾಗಿ ಬಿಪಿ, ಮಧುಮೇಹ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಪೊಲೀಸರು ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮುಂಬೈ ಪೊಲೀಸ್ ಇಲಾಖೆ ಸಿಬ್ಬಂದಿಗೆ ತಿಳಿಸಲಾಗಿದೆ.
ಇದನ್ನೂ ಓದಿ: 'ನಾನೇ ಕೊಲೆ ಮಾಡಿದ್ದು...' ವರದಕ್ಷಿಣೆಗಾಗಿ ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ
ಸಾರ್ವಜನಿಕರ ಸುರಕ್ಷತೆಗಾಗಿ ನಿಯೋಜಿಸಲಾಗುತ್ತಿರುವ ಮುಂಬೈ ಪೊಲೀಸರು ಹೆಚ್ಚಾಗಿ ಸೋಂಕಿಗೊಳಗಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಸಾವಿರಾರು ಪೊಲೀಸ್ ಸಿಬ್ಬಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಹೀಗಾಗಿ ವಿವಿಧ ಅನಾರೋಗ್ಯದಿಂದ ಬಳಲುತ್ತಿರುವ 50-60 ವರ್ಷದೊಳಗಿನ ಪೊಲೀಸರು ಮನೆಯಿಂದಲೇ ಕೆಲಸ ಮಾಡಲು ಗೃಹ ಇಲಾಖೆ ಅವಕಾಶ ಕಲ್ಪಿಸಿದೆ ಎಂದು ಪೊಲೀಸ್ ಮಹಾ ನಿರೀಕ್ಷಕ ಎಂ. ರಾಮಕುಮಾರ್ ತಿಳಿಸಿದರು.
ಮಹಾರಾಷ್ಟ್ರದಲ್ಲಿ ನಿನ್ನೆ 26,538 ಸೋಂಕಿತ ಪ್ರಕರಣಗಳು ದಾಖಲಾಗಿವೆ. ವಿಶೇಷವೆಂದರೆ ಮುಂಬೈನಲ್ಲೇ 15 ಸಾವಿರಕ್ಕೂ ಅಧಿಕ ಪ್ರಕರಣಗಳು ಕಂಡುಬಂದಿವೆ.