ಪಾಟ್ನಾ (ಬಿಹಾರ): 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಈಗಲೇ ಸಿದ್ಧತೆ ಆರಂಭಿಸಿದೆ. ಬಿಹಾರದ ಪಾಟ್ನಾದಲ್ಲಿ ನಡೆದ ಎರಡು ದಿನಗಳ ಪಕ್ಷದ ಎಲ್ಲ ಘಟಕಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. 2024ರ ಚುನಾವಣೆಗೂ ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಅಮಿತ್ ಶಾ ಘೋಷಿಸಿದ್ದಾರೆ.
2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಚರ್ಚೆ ಆಗಾಗ್ಗೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರಾಜಕೀಯ ನಿವೃತ್ತಿ ಮತ್ತು ಹೊಸ ಮುಖಗಳ ಅವಕಾಶ ಕೊಡುವ ಊಹಾಪೋಹಗಳು ನಡೆಯುತ್ತಲೇ ಇರುತ್ತಿವೆ. ಇದರ ನಡುವೆ 2024ರ ಚುನಾವಣೆಯಲ್ಲೂ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅಮಿತ್ ಶಾ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಮತ್ತೊಮ್ಮೆ ನರೇಂದ್ರ ಮೋದಿ ಅವರೇ ಪ್ರಧಾನಿ ಅಭ್ಯರ್ಥಿ ಎಂಬ ನಿರ್ಣಯವನ್ನು ಅಂಗೀಕರಿಸಿದರು ಎಂದು ತಿಳಿದು ಬಂದಿದೆ. ಇದೇ ಸಭೆಯಲ್ಲಿ ಬಿಹಾರದಲ್ಲಿ ಜೆಡಿಯು ಜೊತೆಗಿನ ಮೈತ್ರಿ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಯಿತು.
ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, 2024ರ ಲೋಕಸಭೆ ಚುನಾವಣೆ ಮತ್ತು 2025ರ ವಿಧಾನಸಭೆ ಚುನಾವಣೆ ಎರಡನ್ನೂ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಎದುರಿಸಲಿವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. 2024ರಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಇಂದು ನೀವು ಬದುಕಿದ್ದರೆ ಅದಕ್ಕೆ ಮೋದಿ ಕಾರಣ: ಸಚಿವ ರಾಮ್ ಸೂರತ್ ರಾಯ್