ಲಖನೌ(ಉತ್ತರ ಪ್ರದೇಶ): ಭಾರತ್ ಜೋಡೋ ಯಾತ್ರೆಯ ವೇಳೆ ಸ್ವಾತಂತ್ರ್ಯವೀರ ದಾಮೋದರ್ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲು ಕೇಂದ್ರ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾಂಡೆ ಒತ್ತಾಯಿಸಿದ್ದಾರೆ.
ನವೆಂಬರ್ 17ರಂದು ಮಹಾರಾಷ್ಟ್ರದ ಅಕೋಲಾದಲ್ಲಿ ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಮಾತನಾಡಿ, ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆ ಕೋರಿ ಅವರ ಸೇವಕನಂತೆ ನಡೆದುಕೊಂಡರು. ಆಂಗ್ಲರ ಪಿಂಚಣಿ ಪಡೆದರು. ಇದು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನವಾಗಿದೆ ಎಂದೆಲ್ಲಾ ಕಟುವಾಗಿ ಆರೋಪ ಮಾಡಿದ್ದರು.
ಇದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ, ಸಾವರ್ಕರ್ ಕ್ಷಮಾದಾನ ಕೋರಿದ ಪತ್ರವನ್ನೂ ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು. ಇದರ ವಿರುದ್ಧ ಅಂದೇ ಸಾವರ್ಕರ್ ಅವರ ಮೊಮ್ಮಗ, ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಕೇಸ್ ದಾಖಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಸಾವರ್ಕರ್ ಅವರನ್ನು ಅವಮಾನಿಸುವುದು ರಾಷ್ಟ್ರಕ್ಕೆ ಮಾಡಿದ ಅವಮಾನ. ದೇಶಭಕ್ತರಿಗೂ ಇದು ನಾಚಿಕೆಗೇಡಿನ ಸಂಗತಿಯಾಗಿದೆ. ಇದರಿಂದಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಲಾಗಿದೆ.