ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಜೊತೆಗೆ ಭಿನ್ನಾಭಿಪ್ರಾಯ ಹೊಂದಿರುವ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಪಕ್ಷದ ಮುಖಂಡ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಸುಮಾರು 1 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.
ಇನ್ನು ಈ ಸಭೆಯ ನಂತರ ಸಿಧು ಅಥವಾ ಕಾಂಗ್ರೆಸ್ ಪಕ್ಷ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಿಧು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬುಧವಾರ ಭೇಟಿಯಾಗಿದ್ದರು.
ಮೂಲಗಳ ಪ್ರಕಾರ, 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಂಜಾಬ್ ಕಾಂಗ್ರೆಸ್ ಅನ್ನು ಬಲಪಡಿಸುವುದು ಮತ್ತು ರಾಜ್ಯ ಸರ್ಕಾರದ ಸ್ಥಾನಗಳಲ್ಲಿ ಮಾಡಬೇಕಾದ ಬದಲಾವಣೆಗಳನ್ನು ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
ವರದಿಯ ಪ್ರಕಾರ, ಸಿಧು ಅವರಿಗೆ ಪಂಜಾಬ್ ಸರ್ಕಾರದಲ್ಲಿ ಮಂತ್ರಿ ಸ್ಥಾನ ಮತ್ತು ಪಕ್ಷದ ಪ್ರಚಾರ ಸಮಿತಿ ಮುಖ್ಯಸ್ಥ ಹುದ್ದೆಯನ್ನು ನೀಡಲಾಗಿದೆ. ಸಿಧು ಈ ಹಿಂದೆ ಮುಖ್ಯಮಂತ್ರಿ ಸಿಂಗ್ ಅವರೊಂದಿಗೆ ಕೆಲಸ ಮಾಡಲು ಅಸಮಾಧಾನ ವ್ಯಕ್ತಪಡಿಸಿದ್ದರು.