ಚಂಡಿಗಢ (ಪಂಜಾಬ್) : ರಾಜ್ಯದಲ್ಲಿ ಚರಣಜಿತ್ ಸಿಂಗ್ ಚನ್ನಿ ನೇತೃತ್ವದ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಪಂಜಾಬ್ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರೀಯ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಸಿಧು, ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಹೀಗಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವೆ. ಆದರೆ ಪಕ್ಷದಲ್ಲಿದ್ದುಕೊಂಡು ಸೇವೆ ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ನಲ್ಲಿ ಆಂತರಿಕ ವೈಮನಸ್ಸು ಉಂಟಾಗಿದೆ. ಸೆಪ್ಟೆಂಬರ್ 18 ರಂದು ಇದ್ದಕ್ಕಿದ್ದಂತೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು. ಆ ಬಳಿಕ ಚರಣಜಿತ್ ಸಿಂಗ್ ಚನ್ನಿ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೂ ಅಮರೀಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವಿನ ಸಮರ ಮುಂದುವರೆದಿತ್ತು.
ಇದನ್ನೂ ಓದಿ: ದೇಶದ ಭದ್ರತೆ ದೃಷ್ಟಿಯಿಂದ ಸಿಧು ಪಂಜಾಬ್ ಸಿಎಂ ಆಗೋಕೆ ನನ್ನ ವಿರೋಧವಿದೆ.. ಕ್ಯಾ. ಅಮರೀಂದರ್ ಸಿಂಗ್
ಅಮರೀಂದರ್ ಸಿಂಗ್ ಮುಖ್ಯಮಂತ್ರಿಯಾಗಿದ್ದ ವೇಳೆ, ಇವರ ವಿರೋಧದ ನಡುವೆಯೂ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ರಾಜೀನಾಮೆ ಬಳಿಕ ಅಮರೀಂದರ್ ಸಿಂಗ್, ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿಧು ಅವರನ್ನು ಗೆಲ್ಲಲು ಬಿಡುವುದಿಲ್ಲ.
ದಕ್ಷ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಿಲ್ಲಿಸುತ್ತೇವೆ. ಯಾವುದೇ ಕಾರಣಕ್ಕೂ ಸಿಧು ಸಿಎಂ ಆಗಲು ಅವಕಾಶ ಮಾಡಿ ಕೊಡುವುದಿಲ್ಲ. ಅಂತಹ 'ಅಪಾಯಕಾರಿ ಮನುಷ್ಯನಿಂದ ದೇಶವನ್ನು ರಕ್ಷಿಸಲು ಎಂತಹ ತ್ಯಾಗ ಮಾಡಲು ಸಿದ್ಧನಿರುವೆ ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.