ಮುಂಬೈ: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ರಾಜೀನಾಮೆ ನೀಡುತ್ತಿದ್ದಂತೆ ಅವರ ಜಾಗಕ್ಕೆ ಎನ್ಸಿಪಿಯ ದಿಲೀಪ್ ವಾಲ್ಸೆ ಪಾಟೀಲ್ ಆಯ್ಕೆಯಾಗಿದ್ದಾರೆ.
ಎನ್ಸಿಪಿಯಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ದಿಲೀಪ್ ವಾಲ್ಸೆ, ಸದ್ಯ ಉದ್ಧವ್ ಠಾಕ್ರೆ ಸಂಪುಟದಲ್ಲಿ ಅಬಕಾರಿ ಮತ್ತು ಕಾರ್ಮಿಕ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ 1999ರಿಂದ 2009ರವರೆಗೆ ಕ್ಯಾಬಿನೆಟ್ ಸಚಿವರಾಗಿದ್ದ ಇವರು, ಹಣಕಾಸು ಮತ್ತು ಯೋಜನಾ ಸಚಿವಾಲಯ, ಇಂಧನ ಸಚಿವಾಲಯ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವಾಲಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವಾಲಯದಲ್ಲೂ ಸೇವೆ ಸಲ್ಲಿಸಿದ್ದಾರೆ.
ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪಾಟೀಲ್, ಈ ಹಿಂದೆ ಶರದ್ ಪವಾರ್ ಅವರ ಪಿಎ ಆಗಿಯೂ ರಾಜಕೀಯ ಜೀವನ ಪ್ರಾರಂಭಿಸಿದ್ದರು.
ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: ರಾಜೀನಾಮೆ ನೀಡಿದ ಮಹಾರಾಷ್ಟ್ರ ಗೃಹ ಸಚಿವ ದೇಶಮುಖ್
ಪ್ರತಿ ತಿಂಗಳು 100 ಕೋಟಿ ರೂ. ಹಫ್ತಾ ವಸೂಲಿ ಮಾಡುವಂತೆ ಅನಿಖ್ ದೇಶಮುಖ್, ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಸೂಚನೆ ನೀಡಿದ್ದರು ಎಂದು ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಇದರ ವಿಚಾರಣೆ ಕೈಗೆತ್ತಿಕೊಂಡಿರುವ ಬಾಂಬೆ ಹೈಕೋರ್ಟ್, ಮುಂದಿನ 15 ದಿನಗಳಲ್ಲಿ ಪ್ರಾಥಮಿಕ ವರದಿ ನೀಡುವಂತೆ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.