ನವದೆಹಲಿ: ಹೊಸ ವರ್ಷಕ್ಕೂ ಮುನ್ನ, ದೆಹಲಿಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ರಾಷ್ಟ್ರ ರಾಜಧಾನಿಯಲ್ಲಿ ನೈಟ್ ಕರ್ಫ್ಯೂ ವಿಧಿಸಿದೆ. ಹೀಗಾಗಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ ಎಂದು ಹೇಳಿದೆ.
ಕೋವಿಡ್ ಸೋಂಕು ಮತ್ತು ರೂಪಾಂತರ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕೂ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ.
ದೆಹಲಿಯ ಮುಖ್ಯ ಕಾರ್ಯದರ್ಶಿ ವಿಜಯ್ ದೇವ್ ಅವರು ಸಹಿ ಮಾಡಿದ ಆದೇಶ ಪತ್ರದ ಪ್ರಕಾರ, ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮಗಳು, ಸಭೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದನ್ನು ಡಿಸೆಂಬರ್ 31 ರ ರಾತ್ರಿ 11 ರಿಂದ ಜನವರಿ 1 ರ ಬೆಳಿಗ್ಗೆ 6 ರವರೆಗೆ ಮತ್ತು ಜನವರಿ 1 ರ ರಾತ್ರಿ 11 ಗಂಟೆಯಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆ ವರೆಗೆ ನಿಷೇಧಿಸಿದೆ.
ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಈಗಾಗಲೆ ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ ಮತ್ತು ರಾಜಸ್ಥಾನಗಳು ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮಗಳು ಜಾರಿಗೆ ತಂದಿವೆ.