ಮುಂಬೈ (ಮಹಾರಾಷ್ಟ್ರ): ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಬೈನ ಮಲಾಡ್ ವೆಸ್ಟ್ನ ನ್ಯೂ ಕಲೆಕ್ಟರ್ ಕಾಂಪೌಂಡ್ ಪ್ರದೇಶದಲ್ಲಿ ಬುಧವಾರ ತಡರಾತ್ರಿ ವಸತಿ ಕಟ್ಟಡ ಕುಸಿದು ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಬಿಎಂಸಿ (BMC) ತಿಳಿಸಿದೆ.
ಕಟ್ಟಡ ಕುಸಿತದಿಂದ ಹತ್ತಿರದ ಮನೆಗಳು ಅಪಾಯಕ್ಕೆ ಸಿಲುಕಿದ್ದು, ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 15 ಜನರನ್ನು ರಕ್ಷಿಸಲಾಗಿದೆ ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮತ್ತಷ್ಟು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಧಾವಿಸಿರುವ ಸಚಿವ ಅಸ್ಲಾಮ್ ಶೇಖ್, ಮಳೆಯಿಂದಾಗಿ ಕಟ್ಟಡ ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡ ಜನರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ನೈರುತ್ಯ ಮುಂಗಾರು ಪ್ರವೇಶ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಬುಧವಾರದಿಂದ ಭಾರೀ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮುಂಬೈನಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: 2020ರ ಅತಿವೃಷ್ಟಿಗೆ ಕೊಚ್ಚಿಹೋದ ಮನೆ ಮಾಲೀಕರ ಕೈ ಸೇರದ ಹಣ: ಹೇಗಿದೆ ಪರಿಹಾರ ಪಾವತಿ ಸ್ಥಿತಿಗತಿ?