ನವದೆಹಲಿ: ಕೊರೊನಾ ವೈರಸ್ನ ಅಲೆ ಮಕ್ಕಳ ಮೇಲೆ ಅತಿ ಹೆಚ್ಚಿನ ದುಷ್ಪರಿಣಾಮ ಬೀರುತ್ತದೆ ಎಂಬುದನ್ನು ಸಾಬೀತುಪಡಿಸುವ ಯಾವುದೇ ವೈಜ್ಞಾನಿಕ ಮತ್ತು ವೈದ್ಯಕೀಯ ಅಧ್ಯಯನಗಳಿಲ್ಲ ಎಂದು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.
ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಗೀತಂ ವಿಶ್ವವಿದ್ಯಾಲಯದ 41ನೇ ಸಂಸ್ಥಾಪನಾ ದಿನಾಚರಣೆಗೆ ಅತಿಥಿಯಾಗಿ ಭಾಗವಹಿಸಿದ್ದ ಅವರು ಭಾರತದಲ್ಲಿ ಕೋವಿಡ್ ಮೂರನೇ ಅಲೆಯು ಜನರು ಯಾವ ರೀತಿಯಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಾರೆ ಎಂಬುದನ್ನು ಅವಲಂಬಿಸಿದೆ ಎಂದು ಎಚ್ಚರಿಕೆ ನೀಡಿದರು.
ಮಕ್ಕಳ ಮೇಲೆ ಕೋವಿಡ್ ಪ್ರತೀಕೂಲ ಪರಿಣಾಮ ಬೀರುತ್ತದೆ ಎಂಬುದು ಇನ್ನೂ ಸಾಬೀತಾಗಿಲ್ಲ. ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣದಿಂದ ಅವರು ಹೆಚ್ಚಿನ ಅಪಾಯ ಹೊಂದುವ ಸಾಧ್ಯತೆಯಿದೆ ಎಂದು ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.
ಲಸಿಕೆ ಪ್ರಕ್ರಿಯೆ ವೇಗವಾಗಿ ನಡೆಯದಿದ್ದರೆ, ದೇಶದಲ್ಲಿ ಹೆಚ್ಚು ಕೋವಿಡ್ ಸೋಂಕಿತರು ಪತ್ತೆಯಾಗಬಹುದು. ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಗುಲೇರಿಯಾ ಆತಂಕ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುತ್ತಿದೆ. ಪ್ರಸ್ತುತ ಲಸಿಕೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೋವಿಡ್ ವೈರಸ್ ಕೂಡಾ ರೂಪಾಂತರಗೊಳ್ಳುತ್ತಿದೆ. ಕೋವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ವೈರಸ್ ಪ್ರಯತ್ನಿಸುತ್ತಿದೆ ಎಂದು ರಣದೀಪ್ ಗುಲೇರಿಯಾ ಮಾಹಿತಿ ನೀಡಿದರು.
ಇದನ್ನೂ ಓದಿ: ಹೈಟಿಯಲ್ಲಿ ಪ್ರಬಲ ಭೂಕಂಪ: ಕನಿಷ್ಠ 227 ಮಂದಿ ಸಾವು, ಸುನಾಮಿ ಎಚ್ಚರಿಕೆ