ರಾಯ್ಪುರ (ಛತ್ತೀಸ್ಗಢ): ಕೋವಿಡ್ ಲಸಿಕೆ ಹಾಕಿಸಿಕೊಂಡಿಲ್ಲ ಅಂದ್ರೆ ಸಂಬಳ ಕೊಡಲ್ಲ ಎಂದು ಛತ್ತೀಸ್ಗಢದ ಬುಡಕಟ್ಟು ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ.
ಇಲಾಖೆಯ ಪ್ರತಿಯೊಬ್ಬ ಸಿಬ್ಬಂದಿಯೂ ವ್ಯಾಕ್ಸಿನ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ತಿಂಗಳ ವೇತನವನ್ನು ತಡೆಹಿಡಿಯಲಾಗುತ್ತದೆ ಎಂದು ಮೇ 21ರಂದು ಗೌರೆಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಯ ಬುಡಕಟ್ಟು ಕಲ್ಯಾಣ ಇಲಾಖೆಯ ಸಹಾಯಕ ಆಯುಕ್ತ ಕೆ.ಎಸ್.ಮಸ್ರಾಮ್ ಆದೇಶ ಹೊರಡಿಸಿದ್ದಾರೆ. ಈ ಆದೇಶ ಪ್ರತಿಯು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಕೆಲವರು ಇದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಬುಡಕಟ್ಟು ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಕಚೇರಿಗಳು, ಆಶ್ರಮಗಳು ಅಥವಾ ವಸತಿ ಶಾಲೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ನೌಕರರಿಗೆ ಈ ಆದೇಶ ಅನ್ವಯವಾಗುತ್ತದೆ. ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಕಚೇರಿಯಲ್ಲಿ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಸ್ರಾಮ್, ಕೊರೊನಾ ವಿರುದ್ಧದ ಹೋರಾಟವಾಗಿ ನಮ್ಮ ಎಲ್ಲಾ ಸಿಬ್ಬಂದಿ ಲಸಿಕೆ ಪಡೆಯುವುದು ನಮ್ಮ ಉದ್ದೇಶವಾಗಿದೆ ಹೊರತು ಬೇರೇನೂ ಇಲ್ಲ. ಹೀಗೆ ಆದೇಶ ಹೊರಡಿಸಿದ ಬಳಿಕ ನಮ್ಮ ಇಲಾಖೆಯ ಶೇ. 95ರಷ್ಟು ಸಿಬ್ಬಂದಿ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.