ಜಾಜ್ಪುರ (ಒಡಿಶಾ): ಶಾಲೆಯಲ್ಲಿ ಬಸ್ಕಿ ಹೊಡೆಯುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದ ನಂತರ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಆಘಾತಕಾರಿ ಘಟನೆ ಒಡಿಶಾದ ಜಾಜ್ಪುರ ಜಿಲ್ಲೆಯಲ್ಲಿ ವರದಿಯಾಗಿದೆ. ಓದುವುದು ಬಿಟ್ಟು ಆಟವಾಡುತ್ತಿದ್ದ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಬಸ್ಕಿ ಹೊಡೆಯಲು ಹೇಳಿದ್ದರು ಎಂದು ಹೇಳಲಾಗುತ್ತಿದೆ.
ಒಡಿಶಾದಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷೆಯನ್ನು ಸರ್ಕಾರ ನಿಷೇಧಿಸಿದೆ. ಆದರೂ ಶಿಕ್ಷಕರು ವಿದ್ಯಾರ್ಥಿಗಳನ್ನು ದೈಹಿಕವಾಗಿ ಶಿಕ್ಷಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಟಿ ಎಂಬಂತೆ ಈ ವಿದ್ಯಾರ್ಥಿಯ ಸಾವಿನ ಘಟನೆ ಬೆಳಕಿಗೆ ಬಂದಿದೆ.
ನಡೆದಿದ್ದೇನು?: ಇಲ್ಲಿನ ಸೂರ್ಯ ನಾರಾಯಣ ನೋಡಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ 4ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ತನ್ನ ಇತರ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ. ಇದನ್ನು ಗಮನಿಸಿದ ಶಿಕ್ಷಕರು ವಿದ್ಯಾರ್ಥಿಗಳನ್ನು ಕರೆದು ಪಾಠ ಓದುವುದು ಬಿಟ್ಟು ಏಕೆ ಆಟವಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ತಾವು ಮಾಡಿದ ತಪ್ಪಿಗೆ ಶಿಕ್ಷೆ ಎಂಬಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಯಲು ಸೂಚಿಸಿದ್ದಾರೆ.
ಇದರಿಂದ 4ನೇ ತರಗತಿಯ ವಿದ್ಯಾರ್ಥಿ ಎರಡು ಬಾರಿ ಕುಳಿತು ಎದ್ದೇಳುವಷ್ಟರಲ್ಲಿ ಪ್ರಜ್ಞೆ ತಪ್ಪಿದ್ದಾನೆ. ಕೂಡಲೇ ಶಿಕ್ಷಕರು ವಿದ್ಯಾರ್ಥಿಯ ತಂದೆಗೆ ಮಾಹಿತಿ ನೀಡಿದ್ದಾರೆ. ಅಂತೆಯೇ, ಶಾಲೆಗೆ ದೌಡಾಯಿಸಿದ ತಂದೆ ಮಗನನ್ನು ಮಧುಬನ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ನಂತರ ಅಲ್ಲಿಂದ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಸದ್ಯಕ್ಕೆ ವಿದ್ಯಾರ್ಥಿ ಸಾವಿನ ಬಗ್ಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಇದನ್ನೂ ಓದಿ: ಕೋಚಿಂಗ್ ಸೆಂಟರ್ನ ಹಾಸ್ಟೆಲ್‌ನಲ್ಲಿ ಮಲಗಿದ್ದಾಗ ಹಾವು ಕಡಿತ: ಇಬ್ಬರು ಬಾಲಕಿಯರು ಸೇರಿ ಮೂವರು ವಿದ್ಯಾರ್ಥಿಗಳ ಸಾವು
ಹಾವು ಕಡಿದು ಮೂವರು ಸಾವು ಪ್ರಕರಣ: ಈ ಹಿಂದೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್‌ನಲ್ಲಿ ವಿಷಪೂರಿತ ಹಾವು ಕಚ್ಚಿ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ನಡೆದಿತ್ತು. ರಾತ್ರಿ ಹಾಸ್ಟೆಲ್‌ನಲ್ಲಿ ಮಲಗಿದ್ದಾಗ ವಿದ್ಯಾರ್ಥಿನಿಯರು ಸೇರಿ ನಾಲ್ವರು ವಿದ್ಯಾರ್ಥಿಗಳಿಗೆ ವಿಷಪೂರಿತ ಹಾವು ಕಚ್ಚಿತ್ತು.
ನಂತರ ತಕ್ಷಣವೇ ನಾಲ್ವರನ್ನೂ ಕಿಯೋಂಜಾರ್‌ನಲ್ಲಿರುವ ಜಿಲ್ಲಾ ಪ್ರಧಾನ ಆಸ್ಪತ್ರೆ ಸಾಗಿಸಲಾಗಿತ್ತು. ಅಷ್ಟರಲ್ಲೇ, ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದರು. ಮತ್ತೊಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದ ಎಂದು ವರದಿಯಾಗಿತ್ತು.