ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಿಂದ ಆಗಸ್ಟ್ 12 ರವರೆಗೆ ನಡೆಯುವ ಸಾಧ್ಯತೆಯಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನ ನಡೆಸಲು ಶಿಫಾರಸು ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಅಧಿವೇಶನವು 17 ದಿನಗಳ ಕಾಲ ನಡೆಯಲಿದೆ. ಇದರ ನಡುವೆಯೇ ರಾಷ್ಟ್ರಪತಿ, ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆಯೂ ನಡೆಯಲಿದೆ. ಆದರೆ, ಚುನಾವಣಾ ಆಯೋಗ ಈಗಾಗಲೇ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಉಪರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿ ಮಾಡಿಲ್ಲ.
ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದೆ. ಜುಲೈ 21 ರಂದು ಫಲಿತಾಂಶ ಪ್ರಕಟವಾಗಲಿದೆ. ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅಧಿಕಾರಾವಧಿ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಅದಕ್ಕೂ ಮೊದಲು ಚುನಾವಣೆ ದಿನಾಂಕ ಘೋಷಣೆಯಾಗಲಿದೆ.
ಕಳೆದ ಬಾರಿ ಸಂಸತ್ ಅಧಿವೇಶನದಲ್ಲಿ ಚರ್ಚೆಗೆ ಬಂದ 4 ಮಸೂದೆಗಳೂ ಸೇರಿದಂತೆ ಹಲವು ಮಹತ್ವದ ಮಸೂದೆಗಳಿಗೆ ಪ್ರಸಕ್ತ ಅಧಿವೇಶನದಲ್ಲಿ ಅಂಗೀಕಾರ ಪಡೆಯಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಕಣದಿಂದ ಹಿಂದೆ ಸರಿದ ಶರದ್ ಪವಾರ್