ಜೈಸಲ್ಮೇರ್(ರಾಜಸ್ಥಾನ): ಜೈಸಲ್ಮೇರ್ ಜಿಲ್ಲೆಯಿಂದ ಸುಮಾರು 17 ಕಿ.ಮೀ ದೂರದಲ್ಲಿರುವ ಪೋಳಜಿ ಬಳಿ ಖಾಸಗಿ ಬಸ್ಸೊಂದು ವಿದ್ಯುತ್ ತಂತಿಯ ಸ್ಪರ್ಶಕ್ಕೆ ಒಳಗಾಗಿ, ಮೂವರು ಸಾವನ್ನಪ್ಪಿದ್ದಾರೆ. ಎಂಟು ಪ್ರಯಾಣಿಕರು ಗಂಭೀಯವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪ್ರಕಾರ, ಬಸ್ನ ಮೇಲೂ ಕೆಲವರು ಕುಳಿತು ಪ್ರಯಾಣಿಸುತ್ತಿದ್ದರು. ಜೊತೆಗೆ ಆ ಪ್ರದೇಶದಲ್ಲಿ ರಸ್ತೆ ಕಾಮಗಾರಿ ಕೂಡ ನಡೆಯುತ್ತಿತ್ತು. ವಿದ್ಯುತ್ ತಂತಿ ಬಸ್ಗೆ ಸ್ಪರ್ಶಿಸಿದ ಹಿನ್ನೆಲೆ ಮೂವರು ಸಾವನ್ನಪ್ಪಿದ್ದಾರೆ.
ಅಲ್ಲಿನ ಜಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಪ್ರಯಾಣಿಕರು ಬಸ್‌ನಲ್ಲಿದ್ದರು. ಆದ್ರೆ, ವಿದ್ಯುತ್ ತಂತಿ ಸ್ಪರ್ಶಿಸಿ ಈ ದುರ್ಘಟನೆ ನಡೆದಿದೆ. ಮೃತಪಟ್ಟ ಮೂವರಲ್ಲಿ ಇಬ್ಬರು ಸಹೋದರರಾಗಿದ್ದಾರೆ. ದುರಂತ ಸಂಭವಿಸಿದ ಕೂಡಲೇ ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಅಧಿಕಾರಿಗಳು ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಹೊರಗೆ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ಇದನ್ನೂ ಓದಿ: ಚಿಕಿತ್ಸೆ ನೀಡುತ್ತಿಲ್ಲವೆಂದು ಸ್ಕೈವಾಕ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ರೋಗಿ!
ಈ ಅಪಘಾತದ ಬಗ್ಗೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ರಾಜ್ಯಪಾಲರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.