ನವದೆಹಲಿ: ದೇಶದಲ್ಲಿ ಎರಡನೇ ಹಂತದ ಕೋವಿಡ್ ಅಲೆ ಜೋರಾಗಿರುವ ಕಾರಣ 45 ವರ್ಷದೊಳಗಿನ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವಂತೆ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನಿರ್ದೇಶನ ಕೋರುವಂತೆ ತೆಹ್ಸಿನ್ ಪೂನಾವಾಲಾ ಎಂಬುವವರು ಈ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಉಲ್ಭಣಗೊಂಡಿದ್ದು, ಇದನ್ನ ಪರಿಗಣಿಸಿ ಎಲ್ಲ ವಯಸ್ಸಿನವರಿಗೂ ವಿಶೇಷವಾಗಿ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆ ಹೊಂದಿರುವ ಎಲ್ಲರಿಗೂ ಲಸಿಕೆ ನೀಡುವಂತೆ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ದೀದಿಗೆ ಶಾಕ್ ನೀಡಿದ ಆಯೋಗ.. 24 ಗಂಟೆಗಳ ಕಾಲ ಚುನಾವಣಾ ರ‍್ಯಾಲಿ ನಡೆಸದಂತೆ ನಿರ್ಬಂಧ!
ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆ ತಯಾರಿಕಾ ದೇಶವಾಗಿದ್ದರೂ, ಕೇಂದ್ರ ಸರ್ಕಾರ ಹೆಚ್ಚಿನ ಜನರಿಗೆ ಕೋವಿಡ್ ಲಸಿಕೆ ನೀಡುತ್ತಿಲ್ಲ ಏಕೆ ಎಂಬುದು ಆಶ್ಚರ್ಯಕರವಾಗಿದೆ ಎಂದಿರುವ ಅವರು, ದೇಶದಲ್ಲಿ ಈಗಾಗಲೇ ನೀಡಲಾಗುತ್ತಿರುವ 45 ವರ್ಷ ಮೇಲ್ಪಟ್ಟವರ ನಿರ್ಬಂಧ ತೆಗೆದು ಹಾಕಿ ಎಲ್ಲರಿಗೂ ವ್ಯಾಕ್ಸಿನ್ ನೀಡುವ ಕ್ರಮ ಕೈಗೊಳ್ಳಿ ಎಂದಿದ್ದಾರೆ.
45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ನಿತ್ಯ ಹೊರಗಡೆ ಹೋಗಿ ಕೆಲಸ ಮಾಡುತ್ತಿರುವ ಕಾರಣ ಅವರಿಗೆ ಈ ಲಸಿಕೆ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಅರ್ಜಿಗೆ ಆದ್ಯತೆ ನೀಡಲಾಗಿದೆ ಎಂಬ ಮಾಹಿತಿ ಸಹ ಲಭ್ಯವಾಗಿದೆ. ದೇಶದಲ್ಲಿ ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗುತ್ತಿದ್ದು, ಇದೀಗ ಇದರ ವಿಚಾರಣೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.