ನವದೆಹಲಿ: ಕೋವಿಡ್-19 ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿರುವ ರಾಜ್ಯಗಳಾದ ಮಹಾರಾಷ್ಟ್ರ, ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ ಹಾಗೂ ತಮಿಳು ನಾಡುಗಳ ಮುಖ್ಯಮಂತ್ರಿಗಳೊಂದಿಗೆ ಇಂದು (ಶನಿವಾರ) ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ತಾವು ಪ್ರಧಾನಿಯೊಂದಿಗೆ ಚರ್ಚೆ ನಡೆಸಿದ ಮಾಹಿತಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್, ಮಧ್ಯ ಪ್ರದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಬಗ್ಗೆ ಪ್ರಧಾನಿ ಮೋದಿ ಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಸಿಎಂ ಚೌಹಾಣ್ ಪ್ರಧಾನಿಯವರಿಗೆ ವಿವರಿಸಿದ್ದು, ಈ ನಿಟ್ಟಿನಲ್ಲಿ ಕೇಂದ್ರದ ಸಹಕಾರಕ್ಕೆ ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ.
![MP CM Shivaraj Singh Chavan tweet](https://etvbharatimages.akamaized.net/etvbharat/prod-images/11685143_de.png)
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸಹ ಮೋದಿಯವರೊಂದಿಗೆ ಮಾತುಕತೆ ನಡೆಸಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.
![Himachal CM Jairam Thakur tweet](https://etvbharatimages.akamaized.net/etvbharat/prod-images/11685143_dc.png)
ಈಗಿನ ಅಂಕಿ ಸಂಖ್ಯೆಗಳ ಪ್ರಕಾರ ಮಧ್ಯ ಪ್ರದೇಶ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಒಂದೇ ದಿನದಲ್ಲಿ ಕ್ರಮವಾಗಿ 11,708 ಹಾಗೂ 4,177 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ತಮಿಳುನಾಡಿನಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ಸಲುವಾಗಿ ನೂತನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ರಾಜ್ಯಾದ್ಯಂತ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದ್ದಾರೆ.