ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಘಟನೆ ನಿನ್ನೆ ನಡೆದಿದ್ದು, ಘಟನಾ ಸ್ಥಳಕ್ಕೆ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಭಾನುವಾರ ಲಖಿಂಪುರ್ ಖೇರಿಗೆ ತೆರಳುತ್ತಿದ್ದ ಪ್ರಿಯಾಂಕಾ ಅವರನ್ನು ಸೀತಾಪುರದ ಹರಗಾಂವ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರಿಯಾಂಕಾ ಗಾಂಧಿ ಮತ್ತು ಮಹಿಳಾ ಕಾನ್ಸ್ಟೇಬಲ್ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಪ್ರಿಯಾಂಕಾ ಗಾಂಧಿಯನ್ನು ಜಿಲ್ಲಾ ಪಿಎಸಿ (Provincial Armed Constabulary) ಕಚೇರಿಗೆ ಕರೆದೊಯ್ಯಲಾಯಿತು ಎಂದು ಕಾಂಗ್ರೆಸ್ ತಿಳಿಸಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿನ್ನೆ ತಡರಾತ್ರಿ ಘಟನೆ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಖಂಡನೆ ವ್ಯಕ್ತಪಡಿಸಿದ್ದಾರೆ. 'ರಾಜ್ಯದಲ್ಲಿ ನಡೆದ ಹಿಂಸಾಚಾರದಿಂದ ದುಃಖಿತನಾಗಿದ್ದೇನೆ. ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನುಪ್ರಕಾರ ಶಿಕ್ಷಿಸಲಾಗುವುದು' ಎಂದು ತಿಳಿಸಿದ್ದಾರೆ.
ಲಖಿಂಪುರ ಖೇರಿ ಘಟನೆಯ ಬಗ್ಗೆ..
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲಿಗೆ ಯುಪಿ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭೇಟಿ ನೀಡಬೇಕಿತ್ತು. ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಉಪ ಮುಖ್ಯಮಂತ್ರಿಗೆ ಕಪ್ಪು ಬಾವುಟಗಳನ್ನು ತೋರಿಸಲು ಯೋಜಿಸಿದ್ದರು. ಈ ವೇಳೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ ಪ್ರತಿಭಟನಾನಿರತ ರೈತರ ಮೇಲೆ ತನ್ನ ಕಾರು ಚಲಾಯಿಸಿರುವ ಆರೋಪ ಕೇಳಿಬಂದಿದೆ. ಪರಿಣಾಮ ಹೋರಾಟಗಾರರು ಬಿಜೆಪಿ ಕಾರ್ಯಕರ್ತರ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳನ್ನು ಉರುಳಿಸಿದರು. ಈ ವೇಳೆ ನಾಲ್ವರು ರೈತರು ಸೇರಿದಂತೆ ಒಟ್ಟು 8 ಮಂದಿ ಸಾವನ್ನಪ್ಪಿದ್ದರು.