ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ 10 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಇಂದು ಮತ್ತೆ ಇಡಿ ಮುಂದೆ ಮಂದೆ ರಾಹುಲ್ ಗಾಂಧಿ ಹಾಜರಾಗಿದ್ದಾರೆ.
ರಾಹುಲ್ ಗಾಂಧಿ ಅವರು ತಮ್ಮ Z+ ವರ್ಗದ ಸಿಆರ್ಪಿಎಫ್ ಭದ್ರತಾ ಬೆಂಗಾವಲಿನೊಂದಿಗೆ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಜಾರಿ ನಿರ್ದೇಶನಾಲಯ ಪ್ರಧಾನ ಕಚೇರಿಗೆ ಆಗಮಿಸಿದರು. ಅವರೊಂದಿಗೆ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇದ್ದರು. ವಿಚಾರಣೆ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಭದ್ರತಾ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೋಮವಾರದಂತೆಯೇ ಇಡಿ ಕಚೇರಿಯ ಸುತ್ತಲೂ ಸೆಕ್ಷನ್ 144 ಹೇರಲಾಗಿದೆ.
ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್: 10 ತಾಸು ರಾಹುಲ್ಗೆ ಇಡಿ ಡ್ರಿಲ್... ಇಂದೂ ವಿಚಾರಣೆ ಸಾಧ್ಯತೆ
ಇಡಿ ತಂಡ ಸೋಮವಾರ 10 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾಗಿದೆ. ಸೋಮವಾರ ಅವರ ವಿಚಾರಣೆಯನ್ನು ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಇಂದು ಅವರನ್ನು ಮತ್ತೆ ಕರೆಸಲಾಗಿದೆಯೆಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.