ನವದೆಹಲಿ: ಕಾಂಗ್ರೆಸ್ನ ಕರ್ನಾಟಕ ಘಟಕದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಭಿನ್ನಾಭಿಪ್ರಾಯಗಳನ್ನು ನಿವಾರಿಸಿ, ಪಕ್ಷಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ರಾಹುಲ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ "ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಪಕ್ಷವನ್ನು ಕಟ್ಟಲು ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯಗಳು ಇವೆ ಎಂದು ಹೇಳಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಭೆ ಕರೆದ ರಾಹುಲ್ ಗಾಂಧಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದ್ದಾರೆ.
ರಾಜ್ಯ ನಾಯಕರೊಂದಿಗೆ ನಡೆದ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ವಕ್ತಾರ ರಂದೀಪ್ ಸುರ್ಜೆವಾಲಾ ಭಾಗವಹಿಸಿದ್ದರು.