ನವದೆಹಲಿ: ಮೋದಿ ಉಪನಾಮದ ಬಗ್ಗೆ ವಿವಾದಿತ ಹೇಳಿಕೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ದೂರುದಾರ ಪೂರ್ಣೇಶ್ ಮೋದಿ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ್ದಾರೆ. ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತಾರೆ ಎಂಬ ವರದಿ ಆಧರಿಸಿ ತಮ್ಮ ವಾದವನ್ನು ಆಲಿಸಬೇಕೆಂದು ಈ ಅರ್ಜಿ ದಾಖಲಿಸಿದ್ದಾರೆ.
ಮೋದಿ ಉಪನಾಮದ ಕುರಿತು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ಹಂತದ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಜುಲೈ 7ರಂದು ರಾಹುಲ್ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದರಿಂದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಕಾಂಗ್ರೆಸ್ ಹೇಳಿತ್ತು.
ಇದೀಗ ದೂರುದಾರ ಪೂರ್ಣೇಶ್ ಮೋದಿ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್ ಪ್ರಕಾರ, ಗುಜರಾತ್ ಹೈಕೋರ್ಟ್ ತೀರ್ಪು ಪ್ರಕಟವಾದ ದಿನದಂದೇ ಎಂದರೆ ಜುಲೈ 7ರಂದು ಈ ಕೇವಿಯಟ್ ಸಲ್ಲಿಸಲಾಗಿದೆ. ಯಾವುದೇ ಆದೇಶವನ್ನು ನೀಡುವ ಮೊದಲು ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಬೇಕೆಂದು ಕೇವಿಯಟ್ನಲ್ಲಿ ಮನವಿ ಮಾಡಲಾಗಿದೆ.
ಇದನ್ನೂ ಓದಿ: Congress protest: ರಾಹುಲ್ ಗಾಂಧಿ ಪ್ರಕರಣ.. ಬೆಂಗಳೂರಿನಲ್ಲಿ ಕಾಂಗ್ರೆಸ್ನಿಂದ ಮೌನ ಸತ್ಯಾಗ್ರಹ
ಏನಿದು ಪ್ರಕರಣ?: 2019ರ ಲೋಕಸಭೆಯ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದರು. ಎಲ್ಲ ಕಳ್ಳರು ಮೋದಿ ಎಂಬ ಉಪನಾಮ ಹೇಗೆ ಹೊಂದಿದ್ದಾರೆ ಎಂದು ಪ್ರಶ್ನಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಮೋದಿ ಉಪನಾಮದ ಟೀಕೆ ವಿರುದ್ಧ ಗುಜರಾತ್ನ ಸೂರತ್ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೇ ಮಾರ್ಚ್ 23ರಂದು ಪ್ರಕರಣದ ತೀರ್ಪು ನೀಡಿದ್ದ ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನ ಪರಿಣಾಮ ರಾಹುಲ್ ಗಾಂಧಿ ತಮ್ಮ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಮತ್ತೊಂದೆಡೆ, ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ನೇತೃತ್ವದ ಪೀಠವು ಈ ಅರ್ಜಿಯನ್ನು ತಿರಸ್ಕರಿಸಿತ್ತು. ಅಲ್ಲದೇ, ಕೆಳ ಹಂತದ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಇದರ ವಿರುದ್ಧದ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಕಾಂಗ್ರೆಸ್ ತಿಳಿಸಿದೆ.
ಇದನ್ನೂ ಓದಿ: ಮೋದಿ ಉಪನಾಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆ: ಶಿಕ್ಷೆಗೆ ತಡೆ ಕೋರಿದ ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್