ಮುಂಬೈ (ಮಹಾರಾಷ್ಟ್ರ) : ಗುಜರಾತ್‌ನ ಗೋಧ್ರಾ ಗಲಭೆಯ ನಂತರ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಎಂಬವರ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2008 ರಲ್ಲಿ ಮುಂಬೈ ಸೆಷನ್ಸ್ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಲಯವು 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸದ್ಯ ಈ 11 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಎಲ್ಲ ಆರೋಪಿಗಳನ್ನು ಗೋಧ್ರಾದಲ್ಲಿರುವ ಸಬ್ ಜೈಲಿನಲ್ಲಿ ಇರಿಸಲಾಗಿತ್ತು. ಗುಜರಾತ್ ಸರ್ಕಾರದ ಕ್ಷಮಾದಾನ ಯೋಜನೆಯಡಿ ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ : ಮಾ. 2002 ರಂದು ನಡೆದ ಗೋಧ್ರಾ ಗಲಭೆಯ ನಂತರ ಗುಜರಾತ್‌ನ ನಡೆದ ಹಿಂಸಾಚಾರದಲ್ಲಿ ಬಿಲ್ಕಿಸ್ ಬಾನು ಎಂಬವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಹಿಂಸಾಚಾರದಲ್ಲಿ ಇವರ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದು, ಉಳಿದ ಕುಟುಂಬದ ಸದಸ್ಯರು ಹಿಂಸಾಚಾರದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದರು.
ಪ್ರಕರಣ ಸಂಬಂಧ ಜನವರಿ 21, 2008 ರಂದು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆರೋಪಿಗಳ ಮೇಲೆ ಬಿಲ್ಕಿಸ್ ಬಾನು ಅತ್ಯಾಚಾರ ಮತ್ತು ಅವರ ಕುಟುಂಬದ ಏಳು ಸದಸ್ಯರನ್ನು ಕೊಂದ ಆರೋಪ ಇತ್ತು. ನಂತರ ಬಾಂಬೆ ಹೈಕೋರ್ಟ್ ಈ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪು ಎತ್ತಿ ಹಿಡಿದಿತ್ತು.
ಜೀವಾವಧಿ ಶಿಕ್ಷೆಗೆ ಗುರಿಯಾದ ಈ ಎಲ್ಲ ಅಪರಾಧಿಗಳು 15 ವರ್ಷ ಸೆರೆವಾಸ ಅನುಭವಿಸಿದ್ದರು. ಈ ಬಳಿಕ , ಖೈದಿಯೊಬ್ಬ ತನ್ನನ್ನು ಶೀಘ್ರ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಈ ಬಗ್ಗೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಗುಜರಾತ್ ಸರ್ಕಾರ ಪಂಚಮಹಲ್ ನ ಜಿಲ್ಲಾಧಿಕಾರಿ ಸುಜಲ್ ಮೇತ್ರಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತು. ಈ ಸಮಿತಿಯು ಈ ಎಲ್ಲ 11 ಆರೋಪಿಗಳಿಗೆ ಕ್ಷಮಾದಾನ ನೀಡಲು ಸರ್ವಾನುಮತದಿಂದ ನಿರ್ಧರಿಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಈ ಸಂಬಂಧ ಎಲ್ಲರನ್ನೂ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಮನೆಗೆ ನುಗ್ಗಿದ ಟ್ರಕ್.. ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರ ಸಾವು, ಐವರಿಗೆ ಗಾಯ