ನವ ದೆಹಲಿ: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 51,000 ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಬೆಳಗ್ಗೆ 10.15ಕ್ಕೆ ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನೇಮಕಾತಿ ಪತ್ರಗಳನ್ನು ನೀಡಲಿದ್ದಾರೆ. ಈ ಸಂದರ್ಭದಲ್ಲಿ ಹೊಸದಾಗಿ ನೇಮಕಗೊಂಡ ವ್ಯಕ್ತಿಗಳನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. 'ರೋಜ್‌ಗಾರ್ ಮೇಳ' ಎಂದು ಕರೆಯಲ್ಪಡುವ ಈ ಉದ್ಯೋಗ ಮೇಳವನ್ನು ದೇಶದಾದ್ಯಂತ 46 ಸ್ಥಳಗಳಲ್ಲಿ ನಡೆಯಲಿದೆ ಎಂದು ಪಿಎಂಒ ತಿಳಿಸಿದೆ.
ಈ ಉಪಕ್ರಮವನ್ನು ಬೆಂಬಲಿಸುತ್ತಿರುವ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿ ನಡೆಯುತ್ತಿದೆ. ಹೊಸದಾಗಿ ನೇಮಕಗೊಂಡ ವ್ಯಕ್ತಿಗಳು, ದೇಶದ ವಿವಿಧ ಪ್ರದೇಶಗಳಿಂದ ಆಯ್ಕೆಯಾಗಿರುತ್ತಾರೆ. ಅಂಚೆ ಇಲಾಖೆ, ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಪರಮಾಣು ಶಕ್ತಿ ಇಲಾಖೆ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಹೊಸ ಉದ್ಯೋಗಿಗಳು ಸೇರಿಕೊಳ್ಳಲಿದ್ದಾರೆ.
'ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳ ಒಂದು ಹೆಜ್ಜೆಯಾಗಿದೆ' ಎಂದು ಪಿಎಂಒ ಹೇಳಿದೆ. ಇದು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಯುವಜನರಿಗೆ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ಕೇಂದ್ರದ ರೋಜಗಾರ್ ಮೇಳ: ರಾಜ್ಯದ ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ
ಹೊಸದಾಗಿ ನೇಮಕಗೊಂಡವರು iGOT ಕರ್ಮಯೋಗಿ ಪೋರ್ಟಲ್‌ನಲ್ಲಿ ಲಭ್ಯವಿರುವ ಆನ್‌ಲೈನ್ ಮಾಡ್ಯೂಲ್ 'ಕರ್ಮಯೋಗಿ ಆರಂಭ' ಮೂಲಕ ತಮ್ಮ ಕೌಶಲ್ಯಗಳನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಈ ಪೋರ್ಟಲ್ 680ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್‌ಗಳಿಗೆ ಎಲ್ಲಿಯಾದರೂ ತರಬೇತಿ ಪಡೆಯಲು ಅವಕಾಶ ಕಲ್ಪಿಸುತ್ತದೆ. ಇದು ಅವರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಅವರ ಪಾತ್ರಗಳಿಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಅನುವು ಮಾಡಿಕೊಡುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.
ಏನಿದು ರೋಜ್‌ಗಾರ್ ಮೇಳ?: ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಮಾಡುವ ನಿಟ್ಟಿನಲ್ಲಿ ಯಾವುದೇ ಕೆಲಸ ಮಾಡಿಲ್ಲ. ಮೋದಿ ಸರ್ಕಾರ ಬಂದ ಬಳಿಕ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ ಎಂದು ವಿಪಕ್ಷಗಳು ಈಗಾಗಲೇ ಸಾಕಷ್ಟು ಟೀಕೆಗಳನ್ನು ಮಾಡಿವೆ. ಈ ಹಿನ್ನೆಲೆಯಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ರೋಜ್‌ಗಾರ್ ಮೇಳ ಪ್ರಾರಂಭಿಸಿದೆ. ಕಳೆದ ವರ್ಷ ಅಕ್ಟೋಬರ್ 22 ರಂದು ಪ್ರಧಾನಿ ಮೋದಿ ಅವರು 'ರೋಜ್‌ಗಾರ್ ಮೇಳ'ಕ್ಕೆ ಚಾಲನೆ ನೀಡಿದ್ದರು.
ಇದನ್ನೂ ಓದಿ: ರೋಜ್‌ಗಾರ್ ಮೇಳ: 71 ಸಾವಿರ ಮಂದಿಗೆ 'ನೇಮಕಾತಿ ಪತ್ರ' ವಿತರಿಸಿದ ಪ್ರಧಾನಿ ಮೋದಿ