ಕೋಲ್ಕತ್ತಾ: 2024ರ ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪಶ್ಚಿಮ ಬಂಗಾಳ ಸೇರಿದಂತೆ ಈಶಾನ್ಯ ಭಾರತದ 7 ರಾಜ್ಯಗಳಲ್ಲಿ 35,000 ಸ್ವಚ್ಛಸೇವಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ.
ಈಶಾನ್ಯ ಭಾರತದ ರಾಜ್ಯಗಳಾದ ಅಸ್ಸಾಂ, ತ್ರಿಪುರಾ, ಸಿಕ್ಕಿಂ, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಮಿಜೋರಾಂನಲ್ಲಿ ಆರ್‌ಎಸ್‌ಎಸ್ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ಹೊಸ ಕ್ರಮಗಳನ್ನು ಅಳವಡಿಸಲಾಗುತ್ತಿದೆ. ನೇಮಕಾತಿಯನ್ನು ಹಂತಹಂತಗಳಲ್ಲಿ ಮಾಡಲಾಗುವುದು, ಆರಂಭದಲ್ಲಿ 5,000 ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗುವುದು ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಆರ್‌ಎಸ್‌ಎಸ್ ಹೊಸ ಶಾಖೆಗಳಿಂದ ವಿವಿಧ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ 2024ರ ಲೋಕಸಭೆ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳ ಸೇರಿದಂತೆ ಇಡೀ ಈಶಾನ್ಯ ಭಾರತದಲ್ಲಿ ಸಂಘಟನೆಯನ್ನು ಬಲಪಡಿಸುವುದು ಮುಖ್ಯ ಗುರಿ. ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಯ ನಿರ್ದೇಶನದ ಮೇರೆಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಪ್ರಥಮವಾಗಿ ಪಶ್ಚಿಮ ಬಂಗಾಳದಿಂದಲೇ ನೂತನ ಸ್ವಯಂಸೇವಕರನ್ನು ನೇಮಿಸುವ ಕಾರ್ಯ ನಡೆಯಲಿದೆ.
ಆರ್ಎಸ್ಎಸ್ಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸ್ವಯಂಸೇವಕರ ನೇಮಕಾತಿ ಪ್ರಕ್ರಿಯೆಯನ್ನು 6 ತಿಂಗಳೊಳಗೆ ಪೂರ್ಣಗೊಳಿಸುವಂತೆ ಸಂಸ್ಥೆಗೆ ಸೂಚಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಹೊಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಹೊಸ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜನರ ಮನಸ್ಸನ್ನು ಗೆಲ್ಲಬೇಕಿದೆ ಎಂದು ಹಿರಿಯ ಆರ್‌ಎಸ್‌ಎಸ್ ಸದಸ್ಯರೊಬ್ಬರು ಹೇಳಿದ್ದಾರೆ.
ಇದನ್ನೂ ಓದಿ: ವಿಡಿಯೋ: ರನ್ ವೇಯಿಂದ ಸ್ಕಿಡ್ ಆದ ಟಿಬೆಟ್ ವಿಮಾನಕ್ಕೆ ಬೆಂಕಿ; 25 ಮಂದಿಗೆ ಗಾಯ