ನವದೆಹಲಿ: ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಕುರಿತು ಯಾವುದೇ ನಿರ್ಧಾರ ಕೈಗೊಳ್ಳದಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸೂಚನೆ ನೀಡಿದೆ.
ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಅನರ್ಹತೆ ನೋಟಿಸ್‌ಗಳ ಕುರಿತು ನ್ಯಾಯಾಲಯ ತೀರ್ಪು ನೀಡುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು. ಇದರ ಜೊತೆಗೆ, ಶಿಂದೆ ಪಾಳೆಯದ 15 ಶಾಸಕರ ವಿರುದ್ಧ ಠಾಕ್ರೆ ಬಣ ಕಳುಹಿಸಿದ್ದ ಅನರ್ಹತೆ ನೋಟಿಸ್‌ಗಳ ತುರ್ತು ವಿಚಾರಣೆ ನಡೆಸಲು ನ್ಯಾಯಾಲಯ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ ಹಲವಾರು ಮನವಿಗಳನ್ನು ಪರಿಶೀಲಿಸಿತು. 16 ಬಂಡಾಯ ಶಿವಸೇನೆ ಶಾಸಕರ ವಿರುದ್ಧ ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳು, ಹೊಸದಾಗಿ ಚುನಾಯಿತ ಮುಖ್ಯ ಸಚೇತಕರ ನೇಮಕ, ವಿಶ್ವಾಸ ಮತ ವಿಚಾರಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿತು.
ಇದನ್ನೂ ಓದಿ: ಏಕನಾಥ್ ಶಿಂದೆ ಸರ್ಕಾರದ ಭವಿಷ್ಯ ಇಂದು ಸುಪ್ರೀಂಕೋರ್ಟ್ನಲ್ಲಿ ನಿರ್ಧಾರ